ಬೆಂಗಳೂರು : ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು, ಕರ್ನಾಟಕ ಪಬ್ಲಿಕ್ ಸ್ಕೂಲ್, ಶಿಕ್ಷಕರ ನೇಮಕಾತಿ, ಪರೀಕ್ಷಾ ಫಲಿತಾಂಶ ಸುಧಾರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಒಂದು ಕೆಪಿಎಸ್ ಶಾಲೆಯಲ್ಲಿ ಸುಮಾರು 1,200 ಮಕ್ಕಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುವುದು. ಎಲ್‌ಕೆಜಿಯಿಂದ ಪಿಯುಸಿ ವರೆಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.
ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲ 800 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಸಂಪೂರ್ಣವಾಗಿ ಸಿದ್ಧಗೊಳಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಆರಂಭಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆಪಿಎಸ್ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಚಾರ ಸುಗಮಗೊಳಿಸಲು ಶಾಲಾ ಬಸ್ ಸೌಲಭ್ಯ ಕಲ್ಪಿಸುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯದ ಶಿಕ್ಷಣ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರಸ್ತಾವನೆ ತಕ್ಷಣವೇ ಆರ್ಥಿಕ ಇಲಾಖೆಗೆ ಸಲ್ಲಿಸಲು ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಗಳ ಸುಧಾರಣೆ ಕುರಿತ ಮಾಹಿತಿಯನ್ನೂ ಪರಿಶೀಲಿಸಲಾಯಿತು. ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ 14.06ರಷ್ಟು ಹೆಚ್ಚಳವಾಗಿದೆ. ದ್ವಿತೀಯ ಪಿಯುಸಿಯಲ್ಲಿ ಶೇ.86.48ರಷ್ಟು ಉತ್ತೀರ್ಣ ಪ್ರಮಾಣ ದಾಖಲಾಗಿದ್ದು, ಇದು ಕಳೆದ ಸಾಲಿನಿಗಿಂತ ಶೇ 13.03ರಷ್ಟು ಹೆಚ್ಚಾಗಿದೆ ಎಂದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ 2,393 ಶಾಲೆಗಳು ಶೇ 100 ಫಲಿತಾಂಶ ದಾಖಲಿಸಿದ್ದು, ಕಳೆದ ವರ್ಷ ಈ ಸಂಖ್ಯೆ 766 ಆಗಿತ್ತು. ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲೂ ಶೇ 18ರಷ್ಟು ಏರಿಕೆ ಕಂಡುಬಂದಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಾಧನೆಯಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕಿಂತ ಉತ್ತಮ ಸಾಧನೆ ಮಾಡಿರುವುದು ವಿಶೇಷವಾಗಿದೆ. ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎಸ್ಎಸ್ಎಲ್‌ಸಿ ಉತ್ತೀರ್ಣ ಪ್ರಮಾಣ ಶೇ 94.80 ದಾಖಲಾಗಿದ್ದು, ನಗರ ಪ್ರದೇಶದಲ್ಲಿ ಶೇ 93.20 ದಾಖಲಾಗಿದೆ ಎಂದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ ಮೇಲುಗೈ ಸಾಧಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ ಶೇ 87.62 ಮತ್ತು ನಗರ ಪ್ರದೇಶದಲ್ಲಿ ಶೇ 85.95 ಉತ್ತೀರ್ಣ ಪ್ರಮಾಣ ದಾಖಲಾಗಿದೆ. ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿಲ್ಲ ಹಾಗೂ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ ಎಂದು ಸಭೆಯಲ್ಲಿ ಮಾಹಿತಿ ನೀಡಿಲಾಯಿತು.
ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳ ಜೊತೆಗೆ ಉಚಿತ ನೋಟ್‌ಬುಕ್ ವಿತರಿಸುವ ಬೇಡಿಕೆ ಕುರಿತು ಕೂಡ ಸರ್ಕಾರ ಸಕಾರಾತ್ಮಕವಾಗಿ ಪರಿಶೀಲನೆ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
What do you feel about this post?
Like
Love
Happy
Haha
Sad
