ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಬಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ತಾಪಮಾನ ಕುಸಿತದ ಬೆನ್ನಲ್ಲೇ ವ್ಯಾಪಕ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ತಿಳಿಸಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ತಿಳಿದು ಬಂದಿದೆ.
ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಇದರೊಂದಿಗೆ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಬಾಗಲಕೋಟೆ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆ ಸುರಿವ ಸಾಧ್ಯತೆಯಿದೆ. ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿಲೋಮೀಟರ್ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ಈ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

