ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ : ಡಾ. ನಾಗಲಕ್ಷ್ಮಿ ಚೌಧರಿ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ

Spread the love

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಹೇಳಿದರು.

ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ
ಸದಸ್ಯರಿಗೆ ನಡೆದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013 ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಭಯಮುಕ್ತ ವಾತಾವರಣದಲ್ಲಿ ಕೆಲಸ ನಿರ್ವಹಿಸಿದ್ದಲ್ಲಿ ತಮ್ಮ ಒತ್ತಡವನ್ನು ಕುಟುಂಬದವರ ಮೇಲೆ ಹೇರುವುದಿಲ್ಲ. ಇದರಿಂದ ಕುಟುಂಬ ಹಾಗೂ ಕೆಲಸ ಎರಡನ್ನೂ ಖುಷಿಯಿಂದ ನಿರ್ವಹಿಸಿಕೊಂಡು ಹೋಗಲು ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013 ಕುರಿತು ಜನರಲ್ಲಿ ಅರಿವು ಕಡಿಮೆ ಇದೆ. ಸಮಿತಿಗೆ ದೂರು ಬಂದಾಗ ಅದನ್ನು ಯಾವ ರೀತಿಯಲ್ಲಿ ಬಗೆಹರಿಸಬೇಕು ಎಂಬ ಅರಿವು ಸಮಿತಿಯ ಸದಸ್ಯರುಗಳಿಗೆ ಇರಬೇಕು. ಕಾಯಿದೆಯ ಕುರಿತು ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ತಳಮಟ್ಟದಲ್ಲಿ ಅನುಷ್ಠಾನ ಮಾಡುವುದರೊಂದಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆಯ ವಾತಾವರಣ ದೊರಕುವಂತಾಗಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರುಗಳು ಹಾಗೂ ಮತ್ತಿತರರು ಇದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಸಂಗೀತ ಎಂ.ಕೆ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *