ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೊನೆಗೂ ತಿರುವು ಪಡೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದರೆ ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್ ಗಾಂಧಿಯವರನ್ನು ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.


