ಉ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ತಡೆಗೆ ಈಗಿನಿಂದಲೇ ಸಜ್ಜಾಗಿರಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಖಡಕ್ ಸೂಚನೆ

ಜಿಲ್ಲಾ ಸುದ್ದಿ ಕಾರವಾರ ರಾಜ್ಯ ಶಿರಸಿ

Spread the love

ಕಾರವಾರ: ಮಳೆಗಾಲದಲ್ಲಿ ಸಂಭವಿಸಬಹುದಾದ ನೆರೆ, ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಪ್ರಕೃತಿ ವಿಕೋಪಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿ ಹಾಗೂ ನೌಕಾನೆಲೆ ಸಮೀಪದ ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕೈಗೊಂಡಿರುವ ಕಾಮಗಾರಿಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನೆರೆ ಮತ್ತು ಗುಡ್ಡ ಕುಸಿತ ಸಂಭವಿಸಬಹುದಾದ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ. ಅಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಹೆದ್ದಾರಿ ಪಕ್ಕದ ಅತಿಕ್ರಮಣ ತೆರವಿಗೆ ಸೂಚನೆ
ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಕುಸಿತ ಪ್ರದೇಶಗಳಲ್ಲಿ ಅತಿಕ್ರಮಿಸಿಕೊಂಡು ನಿರ್ಮಿಸಿರುವ ಮಳಿಗೆಗಳನ್ನು ತೆರವುಗೊಳಿಸುವಂತೆ ಉಪ ವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು. ಅಪಾಯದ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ, ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದರು.

ಬಾವಿ ಮುಚ್ಚಿ, ಅಪಾಯ ತಪ್ಪಿಸಿ
ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ವಿಫಲ ಕೊಳವೆಬಾವಿ ಮತ್ತು ತೆರೆದ ಬಾವಿಗಳನ್ನು ತಕ್ಷಣ ಮುಚ್ಚುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು.

24×7 ಹೆಸ್ಕಾಂ ಸಿಬ್ಬಂದಿ ನಿಯೋಜನೆ
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೆಸ್ಕಾಂ ಸಿಬ್ಬಂದಿ 24×7 ಕಾರ್ಯನಿರ್ವಹಿಸಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂಗೆ ಹೆಸ್ಕಾಂ ಸಿಬ್ಬಂದಿಯನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಗನವಾಡಿ, ಶಾಲೆ, ಹಾಸ್ಟೆಲ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಳಿ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ತಂತಿಗಳು ಸೇರಿದಂತೆ ಅಪಾಯ ಉಂಟುಮಾಡುವ ಅಂಶಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.

ಕಾಳಜಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ
ಪ್ರಕೃತಿ ವಿಕೋಪ ಸಂಭವಿಸುವ ಪ್ರದೇಶಗಳನ್ನು ಗುರುತಿಸಿ ಸ್ಥಳೀಯ ಸ್ಪಾಟರ್ಸ್‌ಗಳಿಗೆ ತರಬೇತಿ ನೀಡಬೇಕು. ಸಂತ್ರಸ್ತರ ಸುರಕ್ಷತೆಗಾಗಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಪಿಡಿಒ, ತಹಶೀಲ್ದಾರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸಮನ್ವಯ ಸಭೆ ನಡೆಸಿ ಕಾಳಜಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ, ಡಿಎಫ್ ಒ ಆ್ಯಂಟನಿ ಮರಿಯಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ರು , ತಾ. ಪಂ ಕಾರ್ಯನಿರ್ವಹಣಾಧಿಕಾರಿಗಳು, ಸೀಬರ್ಡ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಮುಖ್ಯಾಂಶಗಳು

ನೆರೆ ಮತ್ತು ಗುಡ್ಡ ಕುಸಿತ ಪ್ರದೇಶಗಳ ಗುರುತು

ಹೆದ್ದಾರಿ ಪಕ್ಕದ ಅತಿಕ್ರಮಣ ತೆರವಿಗೆ ಸೂಚನೆ

ತೆರೆದ ಬಾವಿ, ಕೊಳವೆಬಾವಿ ಮುಚ್ಚಲು ಆದೇಶ

ಹೆಸ್ಕಾಂ ಸಿಬ್ಬಂದಿ 24×7 ಕಾರ್ಯನಿರ್ವಹಣೆ

ಕಾಳಜಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ

Leave a Reply

Your email address will not be published. Required fields are marked *