ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರಕಾರದ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹಾಗೂ ಉಪ ಮುಖ್ಯಮಂತ್ರಿ ಸ್ಥಾನಗಳ ಕುರಿತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಸಿಎಂ ಸಿದ್ದರಾಮಯ್ಯ ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಹೊರಗಡೆ ಇಡಬೇಕು ಎಂಬ ಗೊಂದಲದಲ್ಲಿ ಪಟ್ಟಿ ಫೈನಲ್ ಕೆಲಸಕ್ಕೆ ಹಿನ್ನಡೆ ಆಗುತ್ತಿದೆ.
ಬುಧವಾರ ಸಂಜೆ 4 .05 ಗಂಟೆಗೆ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಿಗದಿ ಆಗಿದ್ದು, ಈ ವೇಳೆ 8 ರಿಂದ 10 ಮಂದಿ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಯಾರು ಎಲ್ಲ ಸಚಿವರಾಗಿ ಒಳಗಡೆ ಬರುತ್ತಾರೆ ಎನ್ನುವುದುದೆ ಸಸ್ಪೆನ್ಸ್ . ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಪ್ರಸ್ತಾವ ಬಹುತೇಕ ಕೈಬಿಡುವ ನಿರ್ಧಾರಕ್ಕೆ ಬಂದಿದ್ದರೂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ. ಜತೆಗೆ ಮೊದಲ ಹಂತದ ಸಂಪುಟ ರಚನೆಯಲ್ಲಿ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಸ್ಥಾನ ನೀಡುವಂತೆಯೂ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಬೇಡಿಕೆ ಮಂಡಿಸಿದ್ದಾರೆ ಎಂದು ಗೊತ್ತಾಗಿದೆ.



