ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಎಲ್ಲರ ಹೊಣೆಗಾರಿಕೆ: ನ್ಯಾ. ಜೈಬುನ್ನೀಸಾ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ
<

Spread the love

ಮಂಗಳೂರು: ಬಾಲಕಾರ್ಮಿಕ ಎಂಬ ಸಾಮಾಜಿಕ ಪಿಡುಗನ್ನು ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಅವರು ಹೇಳಿದರು.

<

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಜಾಗೃತಿ ಜಾಥಾ ಅಥವಾ ಅಭಿಯಾನಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಬಾಲಕಾರ್ಮಿಕ ಪದ್ಧತಿ ವಿರುದ್ಧ ನಿರಂತರ ಹೋರಾಟ ನಡೆಯಬೇಕು ಎಂದು ಹೇಳಿದರು. ಎಲ್ಲಿಯಾದರೂ ಬಾಲಕಾರ್ಮಿಕರು ಕಂಡುಬಂದರೆ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವ ಮೂಲಕ ಹಾಗೂ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಈ ಅನಿಷ್ಠ ಪದ್ಧತಿಯನ್ನು ತೊಲಗಿಸಬಹುದು ಎಂ‌ದರು.

ಮಕ್ಕಳ ಬಾಲ್ಯವು ಸುವರ್ಣಾವಕಾಶವಾಗಿದ್ದು, ಅವರನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದರಿಂದ ದೈಹಿಕ, ಮಾನಸಿಕ ಹಾಗೂ ಶೈಕ್ಷಣಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಆಟ-ಪಾಠಗಳ ಮೂಲಕ ಸಂತೋಷದಿಂದ ಕಲಿಯಬೇಕಾದ ವಯಸ್ಸಿನಲ್ಲಿ ಕೆಲಸಕ್ಕೆ ತಳ್ಳುವುದು ಅವರ ಭವಿಷ್ಯ ಕಸಿದುಕೊಳ್ಳುವುದಕ್ಕೆ ಸಮಾನ ಎಂದರು.

ಅಪಾಯಕಾರಿ ಪರಿಸರದಲ್ಲಿ ದುಡಿಯುವ ಮಕ್ಕಳು ಧೂಮಪಾನ, ಮದ್ಯಪಾನ ಹಾಗೂ ಮಾದಕ ವ್ಯಸನಗಳಂತಹ ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಿ ಮಕ್ಕಳಿಗೆ ಅವರ ಬಾಲ್ಯವನ್ನು ಅನುಭವಿಸಲು ಅವಕಾಶ ಕಲ್ಪಿಸಬೇಕು.18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ತಪ್ಪಿತಸ್ಥರಿಗೆ ಸೆರೆವಾಸದ ಜೊತೆಗೆ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದರು.

ಪೋಷಕರ ಪಾತ್ರ ಮಹತ್ವದ್ದು

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ ಅವರು ಮಾತನಾಡಿ, ಮಕ್ಕಳನ್ನು ಜೀವನ ಕೌಶಲ್ಯ ಅಭಿವೃದ್ಧಿಪಡಿಸುವ ಚಟುವಟಿಕೆಗಳಲ್ಲಿ ತೊಡಗಿಸಬೇಕೇ ಹೊರತು ಹಣ ಸಂಪಾದಿಸುವ ಅಪಾಯಕಾರಿ ಕೆಲಸಗಳಿಗೆ ತಳ್ಳಬಾರದು ಎಂದರು.

ಬಾಲಕಾರ್ಮಿಕ ಪದ್ಧತಿ ಮಕ್ಕಳ ಭವಿಷ್ಯ ಕಸಿದುಕೊಳ್ಳುವ ಸಾಮಾಜಿಕ ಪಿಡುಗಾಗಿದ್ದು, ಅದರ ನಿರ್ಮೂಲನೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಪೋಷಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು.

ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ರಾಜೇಶ್ ಮಿಶ್ರಕೋಟಿ, ಪಡಿ ಸಂಸ್ಥೆಯ ನಿರ್ದೇಶಕ ರೆನ್ನಿ ಡಿಸೋಜಾ, ಡಿವೈಎಸ್ಪಿ ಮಂಜುನಾಥ್ ಆರ್.ಬಿ., ವಕೀಲರ ಸಂಘದ ಅಧ್ಯಕ್ಷ ಜಗದೀಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಸ್. ಶಶಿಧರ್, ಯೋಜನಾ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.

ಹೈಲೈಟ್ಸ್

* ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
* ಬಾಲಕಾರ್ಮಿಕ ನಿರ್ಮೂಲನೆಗೆ ನಿರಂತರ ಜಾಗೃತಿ ಅಗತ್ಯ
* ಮಕ್ಕಳ ಬಾಲ್ಯ ಕಸಿಯುವುದು ಭವಿಷ್ಯ ಕಸಿದಂತೆಯೇ
* 18 ವರ್ಷದೊಳಗಿನ ಮಕ್ಕಳನ್ನು ದುಡಿಸಿದರೆ ಕಾನೂನು ಕ್ರಮ
* ಪೋಷಕರ ಜವಾಬ್ದಾರಿ ಅತ್ಯಂತ ಮಹತ್ವದ್ದು

ಜಾಥಾದ ಮೂಲಕ ಜಾಗೃತಿ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಉರ್ವಾಸ್ಟೋರ್‌ನಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಆವರಣದವರೆಗೆ ಜಾಗೃತಿ ಜಾಥಾ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂದೇಶ ಸಾರಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *