ರೋಗಿಗಳ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮಗಳ ಅನುಷ್ಠಾನ ಮುಖ್ಯ: ಡೀನ್ ಡಾ. ಪೂರ್ಣಿಮಾ

ಜಿಲ್ಲಾ ಸುದ್ದಿ ಆರೋಗ್ಯ ಕಾರವಾರ ಶಿರಸಿ
<

Spread the love

ಕಾರವಾರ: ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೋಂಕು ತಡೆ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು.

<

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸ್ಪತ್ರೆಗಳಲ್ಲಿ ಸೋಂಕು ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಮೂಲಕ ಆಸ್ಪತ್ರೆ ಸಂಬಂಧಿತ ಸೋಂಕುಗಳನ್ನು ಕಡಿಮೆ ಮಾಡಬಹುದು. ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವುದು ಹಾಗೂ ರೋಗಿಗಳ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಇಂತಹ ತರಬೇತಿ ಕಾರ್ಯಾಗಾರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಡಾ. ಪೂರ್ಣಿಮಾ ತಿಳಿಸಿದರು.

ಆರೋಗ್ಯ ಸಿಬ್ಬಂದಿ ಮತ್ತು ರೋಗಿಗಳ ಸುರಕ್ಷತೆಯನ್ನು ಕಾಪಾಡುವಲ್ಲಿ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿಯ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಸೋಂಕು ತಡೆ ಕ್ರಮಗಳ ಬಗ್ಗೆ ನಿರಂತರ ಜಾಗೃತಿ ಮತ್ತು ತರಬೇತಿ ಅಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರ್ಕರ್ ಮಾತನಾಡಿ, ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳು ಮುಂದಿನ ದಿನಗಳಲ್ಲಿ ಆಸ್ಪತ್ರೆ ಸಂಬಂಧಿತ ಸೋಂಕುಗಳನ್ನು ತಡೆಗಟ್ಟಲು ಹಾಗೂ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಸುಧಾರಿಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ರೋಗಿಗಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಆರೋಗ್ಯ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದ್ದು, ತರಬೇತಿಯಲ್ಲಿನ ಮಾಹಿತಿಯನ್ನು ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀಕ್ಷಕ ಡಾ. ನರೇಶ್ ಪವಾಸ್ಕರ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೆಂಕಟೇಶ್ ವಿ.ಎನ್. ಹಾಗೂ ಪ್ರಾಧ್ಯಾಪಕರು ತರಬೇತಿ ನೀಡಿದರು. ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಸಿಬ್ಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

 

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *