ಕಾರವಾರ: ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಅವರನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಹಾಗೂ ಅಗತ್ಯವಿದ್ದರೆ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್ ಹಾಗೂ ಪಾರ್ಸಿ ಸಮುದಾಯಗಳ ಅಭಿವೃದ್ಧಿಗಾಗಿ ಆಯೋಗ ಕಾರ್ಯನಿರ್ವಹಿಸುತ್ತಿದೆ. ಆಯೋಗದ ವೆಬ್‌ಸೈಟ್ ಮೂಲಕ ಉದ್ಯೋಗ ಪೋರ್ಟಲ್‌ನಲ್ಲಿ ನೇವಿ, ಪೊಲೀಸ್, ಎಸ್‌ಎಸ್‌ಸಿ, ರೈಲ್ವೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಉದ್ಯೋಗ ಮಾಹಿತಿಯನ್ನು ಪ್ರತಿ 15 ದಿನಕ್ಕೊಮ್ಮೆ ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ನಿರುದ್ಯೋಗಿ ಯುವಕರು ವೆಬ್‌ಸೈಟ್‌ನಲ್ಲಿ ನೋಂದಾಯಿಸಿದರೆ ಅವರಿಗೆ ವಾಟ್ಸಾಪ್ ಅಥವಾ ಇಮೇಲ್ ಮೂಲಕ ಉದ್ಯೋಗ ಮಾಹಿತಿ ನೇರವಾಗಿ ತಲುಪಿಸಲಾಗುತ್ತದೆ ಎಂದು ತಿಳಿಸಿದರು. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 20ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇದ್ದರೆ ಅವರನ್ನು ಬೆಂಗಳೂರಿನ ‘ಹಜ್ ಭವನ’ದಲ್ಲಿ ಉಚಿತ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಿ-ಡಿಎಸಿ ಸಹಯೋಗದಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ, ಡ್ರೋನ್ ತಂತ್ರಜ್ಞಾನ ಮತ್ತು ಸೂಪರ್ ಕಂಪ್ಯೂಟಿಂಗ್ ಕುರಿತು ಮೂರು ತಿಂಗಳ ವಿಶೇಷ ತರಬೇತಿ ನೀಡುವ ಯೋಜನೆ ರೂಪಿಸಲಾಗಿದೆ. ಮಕ್ಕಳ ಶಿಕ್ಷಣವನ್ನು ಕಡ್ಡಾಯವಾಗಿ ಮುಂದುವರಿಸುವುದು ಪೋಷಕರ ಹಾಗೂ ಸಮುದಾಯದ ಜವಾಬ್ದಾರಿ ಎಂದರು.
ಸಭೆಯಲ್ಲಿ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸತೀಶ್ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಸಾರ್ವಜನಿಕರು ಇದ್ದರು.
What do you feel about this post?
Like
Love
Happy
Haha
Sad
