ಕಾರವಾರ: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿರುವ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನವನ್ನು ಸಮುದಾಯದ ಜನತೆಗೆ ಸಮರ್ಪಕವಾಗಿ ತಲುಪಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಕಡ್ಡಾಯ ಶಿಕ್ಷಣ ಪಡೆಯುವಂತೆ ಹಾಗೂ ಶಾಲೆಯಿಂದ ಹೊರಗುಳಿಯದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಬೇಕು ಎಂದು ಅವರು ಸೂಚಿಸಿದರು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಅಲ್ಪಸಂಖ್ಯಾತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಹಾಗೂ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದರು.
10 ವರ್ಷಗಳ ವಿದ್ಯಾರ್ಥಿಗಳ ದಾಖಲಾತಿ, ಶಾಲೆ ಬಿಟ್ಟವರ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದವರ ವಿವರಗಳ ವರದಿಯನ್ನು 10 ದಿನಗಳೊಳಗೆ ಸಲ್ಲಿಸುವಂತೆ ಅವರು ನಿರ್ದೇಶನ ನೀಡಿದರು.
ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಯೋಜನೆಯಡಿ 7.5 ಲಕ್ಷ ರೂ.ವರೆಗೆ ಭದ್ರತೆ ಇಲ್ಲದೆ ಸಾಲ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶೈಕ್ಷಣಿಕ ಸಾಲ ಮಂಜೂರು ಮಾಡುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ಜನಕಲ್ಯಾಣ ಯೋಜನೆಗಳಲ್ಲಿ ಶೇ.15ರಷ್ಟು ಮೊತ್ತವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ವೆಚ್ಚ ಮಾಡಬೇಕೆಂಬ ಆದೇಶವನ್ನು ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಭಟ್ಕಳದಲ್ಲಿನ ಒಳಚರಂಡಿ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿ.ಪಂ ಸಿಇಓ ಡಾ. ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸತೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
What do you feel about this post?
Like
Love
Happy
Haha
Sad
