ಮಂಗಳೂರು: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು, ಶಿಕ್ಷಣ ಸಂಸ್ಥೆಯ ಸಂಚಾಲಕರು ಹಾಗೂ ಪ್ರಾಂಶುಪಾಲರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಅಭ್ಯಾಸದ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯ ಎಂದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಝೈನ್ ಶೇಖ್ ಜಾಕಿರ್, ಉಪಾಧ್ಯಕ್ಷೆ ಸಿಂಚನ ಸೇರಿದಂತೆ ವಿವಿಧ ವಿಭಾಗಗಳ ಪದಾಧಿಕಾರಿಗಳಿಗೆ ಬ್ಯಾಡ್ಜ್‌ಗಳನ್ನು ವಿತರಿಸಲಾಯಿತು. ಬಳಿಕ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್ ಅವರು ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅತೀ ವಂದನೀಯ ಗುರು ಐವನ್ ಮೈಕಲ್ ರೊಡ್ರಿಗಸ್ ಅವರು ಮಾತನಾಡಿ, ವಿದ್ಯಾರ್ಥಿ ಜೀವನವು ಕೇವಲ ಶಿಕ್ಷಣಕ್ಕೆ ಸೀಮಿತವಾಗದೆ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನವನ್ನು ರೂಢಿಸಿಕೊಳ್ಳುವ ಸುವರ್ಣಾವಕಾಶವಾಗಿದೆ ಎಂದರು.
ಕ್ಯಾಂಪಸ್ ನಿರ್ದೇಶಕ ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಅತೀ ವಂದನೀಯ ಗುರು ಡಾ. ಆಲ್ವಿನ್ ಸೆರಾವೊ, ಮಿಲಾಗ್ರಿಸ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಅತೀ ವಂದನೀಯ ಗುರು ಉದಯ ಫೆರ್ನಾಂಡಿಸ್, ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಡಿಕ್ಸನ್ ಡಿಸೋಜಾ ಹಾಗೂ ಕಾರ್ಯದರ್ಶಿ ಜಸಿಂತಾ ಫರ್ನಾಂಡಿಸ್ ಇದ್ದರು.
ಶೆರಿಲ್ ಪಿಂಟೊ ಸ್ವಾಗತಿಸಿದರು. ಲಿಡ್ವಿನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಝೈನ್ ಶೇಖ್ ಜಾಕಿರ್ ವಂದಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಲೇಜು ಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.
What do you feel about this post?
Like
Love
Happy
Haha
Sad
