ಪಲ್ಸ್ ಪೊಲಿಯೋ ಸಿದ್ದತೆ ಮಾಡಿಕೊಳ್ಳಲು ಕಮಿಷನರ್ ರವಿಚಂದ್ರ ನಾಯಕ್ ಸೂಚನೆ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ
<

Spread the love

ಮಂಗಳೂರು: ಇದೇ 28 ರಂದು ನಡೆವ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪಾಲಿಕೆ ಕಮಿಷನರ್ ರವಿಚಂದ್ರ ನಾಯಕ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

<

ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,0 ರಿಂದ 5 ವರ್ಷದೊಳಗಿನ ಯಾವುದೇ ಮಗುವೂ ಲಸಿಕೆಯಿಂದ ವಂಚಿತರಾಗಬಾರದು. ಮುಂಜಾಗೃತಾ ಕ್ರಮವಾಗಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಕಾರ್ಮಿಕರ ಮಕ್ಕಳಿಗೂ ಲಸಿಕೆ ಲಭ್ಯವಾಗುವಂತೆ ವಿಶೇಷ ವ್ಯವಸ್ಥೆ ಕಲ್ಪಿಸಬೇಕು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು. ಜೂನ್ 29 ರಿಂದ ಜುಲೈ 1 ರವರೆಗೆ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ನವಜಾತ ಶಿಶುಗಳನ್ನು ಗುರುತಿಸಿ ಕಡ್ಡಾಯವಾಗಿ ಲಸಿಕೆ ನೀಡಬೇಕು. ತಾಯಂದಿರ ಸಭೆಗಳ ಮೂಲಕ ಪಲ್ಸ್ ಪೋಲಿಯೋ ಲಸಿಕಾ ದಿನಾಂಕ ಹಾಗೂ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಇದೇ ವೇಳೆ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣ ಕುರಿತು ಮಾತನಾಡಿದ ಅವರು, ಆರೋಗ್ಯ ಇಲಾಖೆ ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಲಾರ್ವಾ ವಿರೋಧಿ ಕಾರ್ಯಾಚರಣೆಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಅನಗತ್ಯ ನೀರಿನ ಸಂಗ್ರಹವನ್ನು ತಡೆಯುವ ಮೂಲಕ ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸಬಹುದು ಎಂದು ತಿಳಿಸಿದರು.

ಇತರ ಜಿಲ್ಲೆಗಳಿಂದ ಬರುವ ಕಾರ್ಮಿಕರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಕಟ್ಟಡ ಸಂಸ್ಥೆಗಳು ಆರೋಗ್ಯ ತಪಾಸಣೆ ಮತ್ತು ಜಾಗೃತಿ ಸಭೆಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು. ಸೊಳ್ಳೆ ನಿಯಂತ್ರಣಕ್ಕಾಗಿ ನಿಯಮಿತ ಫಾಗಿಂಗ್ ಡ್ರೈವ್ ನಡೆಸುವಂತೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ವೆನ್‌ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಆರ್‌ಸಿಎಚ್ ಅಧಿಕಾರಿ ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಕುಲಾಲ್, ಡಾ. ಹರ್ಷಿತ್ ಸೇರಿದಂತೆ ಇತರರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *