ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಹಾಗೂ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶೀಘ್ರ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂಬಂಧ ಸೋಮವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1ರಡಿ 3 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿತ್ತು. ಕಾಮಗಾರಿಗೆ ಗುದ್ದಲಿ ಪೂಜೆಯನ್ನೂ ನೆರವೇರಿಸಲಾಗಿದ್ದರೂ, ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಕಾಮಗಾರಿ ಸ್ಥಗಿತಗೊಂಡಿರುವುದು ಬೇಸರದ ಸಂಗತಿ ಎಂದರು.
ದಲಿತರ ಕುಂದುಕೊರತೆ ಸಭೆಗಳಲ್ಲಿಯೂ ಈ ವಿಚಾರವನ್ನು ಸಮುದಾಯದ ಮುಖಂಡರು ಪ್ರಸ್ತಾಪಿಸಿದ್ದು, ಇದೀಗ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶೀಘ್ರದಲ್ಲೇ ಅಡೆತಡೆಗಳನ್ನು ನಿವಾರಿಸಿ ಕಾಮಗಾರಿಗೆ ವೇಗ ನೀಡಬೇಕು ಎಂದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಉಪ ಆಯುಕ್ತ ನರೇಶ್ ಶೆಣೈ, ತಹಶೀಲ್ದಾರ್ ರಮೇಶ್ ಬಾಬು, ಅರಣ್ಯ ಇಲಾಖೆ ರಾಜೇಶ್ ಬಳಿಗಾರ್, ಸಮಾಜ ಕಲ್ಯಾಣ ಇಲಾಖೆಯ ಸುರೇಶ್ ಅಡಿಗ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಇದ್ದರು.
What do you feel about this post?
Like
Love
Happy
Haha
Sad
