ಮಂಗಳೂರು: ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಪರಿಕಲ್ಪನೆ, ಜನಸಾಮಾನ್ಯರ ಕಲ್ಯಾಣದ ಬದ್ಧತೆ ಹಾಗೂ ದೂರದೃಷ್ಟಿಯ ಆಡಳಿತ ಇಂದಿನ ಆಡಳಿತಗಾರರಿಗೆ ಅನುಕರಣೀಯ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಒಕ್ಕಲಿಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಬಲ್ಮಠದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ತಮ್ಮ ಕಾಲಕ್ಕಿಂತಲೂ ಮುಂದಿರುವ ಚಿಂತನೆ ಹಾಗೂ ದೂರದೃಷ್ಟಿಯಿಂದ ನಗರ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕಿದ್ದರು. ಅವರ ಅಭಿವೃದ್ಧಿ ಪರಿಕಲ್ಪನೆ ಇಂದಿಗೂ ಪ್ರಸ್ತುತವಾಗಿದ್ದು, ಯುವಪೀಳಿಗೆ ಅವರ ಜೀವನ, ಸಾಧನೆ ಮತ್ತು ಆಡಳಿತ ಮೌಲ್ಯಗಳನ್ನು ಅರಿತುಕೊಳ್ಳುವುದು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ವಿಶ್ವವಿದ್ಯಾನಿಲಯ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಗಣಪತಿ ಗೌಡ, ಕೆಂಪೇಗೌಡರು ಬಹುಮುಖ ಪ್ರತಿಭೆಯ ಆಡಳಿತಗಾರ ಹಾಗೂ ದೂರದೃಷ್ಟಿಯ ನಗರ ನಿರ್ಮಾತೃ ಎಂದು ಬಣ್ಣಿಸಿದರು.
“ಬೆಂಗಳೂರು ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿದ ಕೆಂಪೇಗೌಡರು ಕನ್ನಡ ನಾಡಿನ ಅಸ್ಮಿತೆಯಾಗಿದ್ದಾರೆ. ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸಿ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಚಿಂತನೆ ಬೆಳೆಸಿದ ಮಹನೀಯರಾಗಿದ್ದರು” ಎಂದು ಹೇಳಿದರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ ಹಾಗೂ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿದರು.
ಜಯಂತಿ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಕೆ.ಎಸ್., ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ., ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ ಸೇರಿದಂತೆ ಹಲವು ಗಣ್ಯರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವಸುಧಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಇತಿಹಾಸ ಪ್ರಾಧ್ಯಾಪಕ ಸಂತೋಷ್ ವಂದಿಸಿದರು. ಕನ್ನಡ ಉಪನ್ಯಾಸಕಿ ಯಶೋಧ ಕೆ. ಕಾರ್ಯಕ್ರಮ ನಿರೂಪಿಸಿದರು.
What do you feel about this post?
Like
Love
Happy
Haha
Sad



