ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು.
ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ ಬದುಕನ್ನೇ ಹಾಳು ಮಾಡುತ್ತದೆ. ಮಾದಕ ದ್ರವ್ಯಗಳಿಗೆ ಸಂಬಂಧಿಸಿದ ಅಪರಾಧಗಳಿಗೆ ಕಠಿಣ ಕಾನೂನುಗಳಿದ್ದು, ಇಂತಹ ಪ್ರಕರಣಗಳಲ್ಲಿ ಸಿಲುಕಿದರೆ ಪಾಸ್‌ಪೋರ್ಟ್, ಉದ್ಯೋಗ ಹಾಗೂ ಉನ್ನತ ಶಿಕ್ಷಣ ಸೇರಿದಂತೆ ಜೀವನದ ಹಲವು ಅವಕಾಶಗಳಿಂದ ವಂಚಿತರಾಗುವ ಪರಿಸ್ಥಿತಿ ಎದುರಾಗಬಹುದು ಎಂದರು.
ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಹಾವಳಿ ತಡೆಗಟ್ಟಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಅಬಕಾರಿ, ಮೀನುಗಾರಿಕೆ, ಬಂದರು ಹಾಗೂ ಕರಾವಳಿ ಭದ್ರತಾ ಇಲಾಖೆಗಳ ಸಹಭಾಗಿತ್ವದಲ್ಲಿ ಕರಾವಳಿ ಸೇರಿದಂತೆ ವಿವಿಧ ಮಾರ್ಗಗಳಿಂದ ಮಾದಕ ದ್ರವ್ಯಗಳು ಜಿಲ್ಲೆಗೆ ಪ್ರವೇಶಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಕೈಜೋಡಿಸಬೇಕು. ರಾಜ್ಯ ಪೊಲೀಸ್ ಇಲಾಖೆಯ ಮೊಬೈಲ್ ಅನ್ವಯಿಕೆಯನ್ನು ಬಳಸಿಕೊಂಡು, ಅದರಲ್ಲಿರುವ ‘ಡ್ರಗ್ ಮುಕ್ತ ಕರ್ನಾಟಕ’ ವಿಭಾಗದ ಮೂಲಕ ಮಾದಕ ದ್ರವ್ಯಗಳ ಮಾರಾಟ ಅಥವಾ ಬಳಕೆಯ ಕುರಿತು ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಜೀವನದಲ್ಲಿ ವಿದ್ಯಾರ್ಥಿಗಳು ಓದು, ಪರೀಕ್ಷೆ ಮತ್ತು ಭವಿಷ್ಯದ ಬಗ್ಗೆ ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಮಾನಸಿಕ ಸ್ಥೈರ್ಯ ಬೆಳೆಸುವ ಸಮಾಲೋಚನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜೀವನದಲ್ಲಿ ಎದುರಾಗುವ ನಕಾರಾತ್ಮಕ ಮಾತುಗಳಿಗೆ ಕುಗ್ಗದೆ ಧೈರ್ಯದಿಂದ ಸವಾಲುಗಳನ್ನು ಎದುರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಿಶ್ಚಲ್ ನರೋನಾ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad



