ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಳೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದೀತೀರ, ಸಮುದ್ರತೀರ ಮತ್ತು ತಗ್ಗು ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಬೇಕು ಎಂದು ತಿಳಿಸಿದ್ದಾರೆ.
ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳನ್ನು ಬಿಟ್ಟು ತೆರಳದಂತೆ ಸೂಚಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad



