ಓವರ್‌ಲೋಡ್ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ ಜಿಲ್ಲಾ ಸುದ್ದಿ ರಾಜ್ಯ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಗಿಸುತ್ತಿರುವ ಓವರ್‌ಲೋಡ್ ವಾಹನಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸುವಂತೆ ಹಾಗೂ ಜಿಲ್ಲೆಯಾದ್ಯಂತ ತಪಾಸಣೆಗಳನ್ನು ಮತ್ತಷ್ಟು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

<

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದೇ ರಸ್ತೆಗೆ ಸೀಮಿತವಾಗದೆ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಲಗೇಜ್ ಹೊರತುಪಡಿಸಿ ಇತರೆ ವಸ್ತುಗಳನ್ನು ಸಾಗಿಸುತ್ತಿರುವ ಕುರಿತು ವಿಶೇಷ ತಪಾಸಣೆ ನಡೆಸಬೇಕು. ದೂರದ ಪ್ರಯಾಣದ ಬಸ್‌ಗಳಲ್ಲಿ ಇಬ್ಬರು ಚಾಲಕರು ಕರ್ತವ್ಯ ನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳುವಂತೆಯೂ ಅವರು ಸೂಚನೆ ನೀಡಿದರು.

ಫ್ಲೈಓವರ್ ಹಾಗೂ ಹೆದ್ದಾರಿಗಳ ಸುರಕ್ಷತೆಗೆ ಒತ್ತು: ಕಾರವಾರದ ಫ್ಲೈಓವರ್ ಕೆಳಭಾಗದಲ್ಲಿ ಅಂಗಡಿಗಳು ಹಾಗೂ ಜನವಸತಿ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು.  ಎನ್‌ಎಚ್‌ಎಐ ಮಾರ್ಗಸೂಚಿಯಂತೆ ಫ್ಲೈಓವರ್ ಕೆಳಭಾಗದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆಯೂ ತಿಳಿಸಿದರು.

ಕುಮಟಾದಲ್ಲಿ ಅಪಘಾತ ತಡೆಗೆ ಕ್ರಮ: ಇತ್ತೀಚಿನ ದಿನಗಳಲ್ಲಿ ಕುಮಟಾ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಬೀದಿದೀಪ, ರಸ್ತೆ ಮಾರ್ಕಿಂಗ್ ಹಾಗೂ ಕ್ಯಾಟ್‌ಐಗಳನ್ನು ಅಳವಡಿಸಲು ಸೂಚನೆ ನೀಡಿದರು.

ಹೆದ್ದಾರಿ ಪಕ್ಕದ ಗುಡ್ಡ ಪ್ರದೇಶಗಳಲ್ಲಿ ಜಲಪಾತ ವೀಕ್ಷಿಸಲು ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿ ಫೋಟೋ ಹಾಗೂ ವಿಡಿಯೊ ಚಿತ್ರೀಕರಣ ಮಾಡುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿರುವುದರಿಂದ ಅಂತಹ ಸ್ಥಳಗಳಲ್ಲಿ **’ನೋ ಪಾರ್ಕಿಂಗ್’** ಸೇರಿದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಘಟ್ಟ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸಲು ಸೂಚನೆ: ಘಟ್ಟ ಪ್ರದೇಶದಿಂದ ಬರುವ ವಾಹನ ಚಾಲಕರಿಗೆ ಮುಂದಿರುವ ತಿರುವುಗಳ ಮಾಹಿತಿ ಲಭ್ಯವಿಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಇಳಿಜಾರು ಆರಂಭವಾಗುವ ಸ್ಥಳದಿಂದಲೇ ಮುಂದಿನ ತಿರುವುಗಳ ಸಂಖ್ಯೆಯನ್ನು ಸೂಚಿಸುವ ಫಲಕಗಳನ್ನು ಅಳವಡಿಸಬೇಕು. ಜೊತೆಗೆ ಎಲ್ಲಾ ಸೇತುವೆಗಳ ಬಳಿ ಸೂಚನಾ ಫಲಕ ಹಾಗೂ ರಾತ್ರಿ ವೇಳೆ ಸ್ಪಷ್ಟವಾಗಿ ಗೋಚರಿಸುವ ಸುರಕ್ಷತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಪೊಲೀಸ್ ಇಲಾಖೆಯ ಸಲಹೆಯಂತೆ ಅಗತ್ಯವಿರುವ ಸ್ಥಳಗಳಲ್ಲಿ ಎಎನ್‌ಪಿಆರ್ ಕ್ಯಾಮೆರಾಗಳನ್ನು ಅಳವಡಿಸುವುದು, ಬ್ಲ್ಯಾಕ್‌ಸ್ಪಾಟ್ ಪ್ರದೇಶಗಳಲ್ಲಿ ಹೆಚ್ಚುವರಿ ಸುರಕ್ಷತಾ ಕ್ರಮ ಕೈಗೊಳ್ಳುವುದು, ವೇಗಮಿತಿ ಸೂಚನಾ ಫಲಕಗಳು ಹಾಗೂ ಬ್ಲಿಂಕರ್‌ಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ವಿಭಾಗಾಧಿಕಾರಿ ಶ್ರವಣಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *