ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಬಾಳೆಗುಳಿ ಸಮೀಪ ಶನಿವಾರ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಲಗೇರಿ ನಿವಾಸಿ ಸಂದೀಪ್ ನಾಯಕ ಎಂದು ಗುರುತಿಸಲಾಗಿದೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸಚಿವ ಯು.ಟಿ. ಖಾದರ್ ಅವರು ರಸ್ತೆ ಮಾರ್ಗವಾಗಿ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಸಚಿವರ ಬೆಂಗಾವಲು ಪಡೆಯ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಪೊಲೀಸ್ ವಾಹನಕ್ಕೆ ಸಂದೀಪ್ ಚಾಲನೆ ಮಾಡುತ್ತಿದ್ದ ಸ್ಕೂಟಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಸ್ಕೂಟಿ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತವನ್ನು ಗಮನಿಸಿದ ಸಚಿವ ಯು.ಟಿ. ಖಾದರ್ ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ಗಾಯಾಳುವಿನ ಬಳಿ ಧಾವಿಸಿದರು. ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ಸಚಿವರು, ಕೂಡಲೇ ಅಂಕೋಲಾದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿ ಅಗತ್ಯ ವ್ಯವಸ್ಥೆ ಮಾಡಿದರು.
ಗಾಯಾಳು ಸಂದೀಪ್ ನಾಯಕ ಅವರಿಗೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

