ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜುಲೈ 5 ರಂದು ಮಧ್ಯಾಹ್ನ 1 ಗಂಟೆಯಿಂದ ಜುಲೈ 9 ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಸಕ್ರಿಯಗೊಳಿಸಲಾಗಿದೆ. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ದೂರವಾಣಿ ಸಂಖ್ಯೆ 08382-229857 ಅಥವಾ ಮೊಬೈಲ್ 9483511015 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತದ ಸೂಚನೆಯಂತೆ, ತೀವ್ರವಾದ ಗಾಳಿ ಮತ್ತು ಭಾರೀ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರ ಬರುವುದನ್ನು ತಪ್ಪಿಸಬೇಕು. ನದಿ, ಹೊಳೆ, ಜಲಾಶಯ, ಸಮುದ್ರ ತೀರ ಸೇರಿದಂತೆ ನೀರಿನ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಮರಗಳು, ವಿದ್ಯುತ್ ಕಂಬಗಳು, ಜಾಹೀರಾತು ಫಲಕಗಳು ಹಾಗೂ ಹಳೆಯ ಕಟ್ಟಡಗಳ ಸಮೀಪ ನಿಲ್ಲದಂತೆ ಸೂಚಿಸಲಾಗಿದ್ದು, ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಜಲಪಾತ, ನದಿ ಮತ್ತು ಅಪಾಯಕಾರಿ ಪ್ರದೇಶಗಳಿಗೆ ಭೇಟಿ ನೀಡದಂತೆ ಮನವಿ ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದರೆ ವಾಹನ ಚಲಾಯಿಸುವುದನ್ನು ತಪ್ಪಿಸಿ ಸುರಕ್ಷಿತ ಸ್ಥಳದಲ್ಲೇ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.
ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ನಂಬುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
What do you feel about this post?
Like
Love
Happy
Haha
Sad



