ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣವು ಕೋಟ್ಯಂತರ ರಾಮಭಕ್ತರ ನಂಬಿಕೆಗೆ ಧಕ್ಕೆ ತಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಮೌನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ಈ ವಿಷಯವನ್ನು ತಮ್ಮ ‘ಮನದ ಮಾತು’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿಲ್ಲ ಎಂದು ಟೀಕಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಚಾರ ಸಮಿತಿಯು ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ ಅವರು, ರಾಜ್ಯ ಸರ್ಕಾರದ ಜನಪರ ಯೋಜನೆಗಳು ಹಾಗೂ ಐದು ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಕೈಬಿಡದಂತೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ ಅವರು ಮಾತನಾಡಿ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹಕ್ಕು ಕಸಿಯುವ ಪ್ರಯತ್ನ ನಡೆಯದಂತೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ರಾಮಮಂದಿರ ಹುಂಡಿ ಕಳವು ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದೇಕೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡೇನಿಸ್ ಡಿಸಿಲ್ವಾ ಅವರು ಮಾತನಾಡಿ, ಪಕ್ಷದ ಸಂಘಟನೆಯನ್ನು ಬಲಪಡಿಸಲು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಪ್ರಚಾರ ಸಮಿತಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಬೂತ್ ಮಟ್ಟದವರೆಗೂ ಕಾರ್ಯಕರ್ತರನ್ನು ಸಂಘಟಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರಚಾರ ಸಮಿತಿ ಅಧ್ಯಕ್ಷರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಜೆ.ಆರ್. ಲೋಬೊ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.
What do you feel about this post?
Like
Love
Happy
Haha
Sad



