ಪೌರ ಕಾರ್ಮಿಕರಿಗೆ ಎಲ್ಲ ಸೌಲಭ್ಯಗಳು ಸಮಯಕ್ಕೆ ದೊರೆಯಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಕಲ್ಪಿಸಲಾಗುವ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಯಾಗಬೇಕು. ಜೊತೆಗೆ ಇಎಸ್‌ಐ ಹಾಗೂ ಇಪಿಎಫ್‌ ಹಣವನ್ನು ನಿಯಮಾನುಸಾರವೇ ಕಡಿತಗೊಳಿಸಲಾಗುತ್ತಿದೆ ಎಂಬುದನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

ಕರ್ತವ್ಯ ನಿರ್ವಹಿಸುವ ವೇಳೆ ಪೌರ ಕಾರ್ಮಿಕರು ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸುವಂತೆ ಜಾಗೃತಿ ಮೂಡಿಸಬೇಕು. ಅವರ ಆರೋಗ್ಯದ ಹಿತದೃಷ್ಟಿಯಿಂದ ನಿಯಮಿತ ಆರೋಗ್ಯ ತಪಾಸಣೆ ಹಾಗೂ ಸಮಗ್ರ ಆರೋಗ್ಯ ತಪಾಸಣೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ತಿಳಿಸಿದರು.

ಗೃಹಭಾಗ್ಯ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು. ಈಗಾಗಲೇ ಆರಂಭಿಸಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಿ, ಪೂರ್ಣಗೊಂಡ ಮನೆಗಳನ್ನು ತಕ್ಷಣವೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರಿಂದ ಮ್ಯಾನ್‌ಹೋಲ್‌ಗಳನ್ನು ಸ್ವಚ್ಛಗೊಳಿಸಬಾರದು. ಅದರ ಬದಲಿಗೆ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನೇ ಬಳಸಬೇಕು. ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಯಂತ್ರಗಳ ಬಳಕೆ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅವರ ನಿರ್ದೇಶನದಂತೆ ಪೌರ ಕಾರ್ಮಿಕರಿಗೆ ಕಲ್ಪಿಸಿರುವ ಸೌಲಭ್ಯಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *