ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ.ಜಾತಿ ಮತ್ತು ಪಂಗಡದವರಿಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಮಂಜೂರು ಮಾಡುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮಗಳಿಂದ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ಈ ಯೋಜನೆಗಳಿಗೆ ಆರ್ಥಿಕ ಮತ್ತು ಭೌತಿಕ ಗುರಿಯನ್ವಯ ಅರ್ಜಿಗಳನ್ನು ಮಂಜೂರು ಮಾಡಿ, ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ಸಕಾಲದಲ್ಲಿ ಅನುದಾನ ದೊರೆಯುವಂತೆ ನೋಡಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ಉಪ ವಿಭಾಗಮಟ್ಟದಲ್ಲಿ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು
ನಡೆಸುವುದರ ಮೂಲಕ ಜಿಲ್ಲೆಯ ಪ.ಜಾತಿ ಮತ್ತು ಪಂಗಡದ ಜನತೆಯ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ತಿಳಿಸಿದ ಅವರು ಜಿಲ್ಲೆಯ ಯಾವುದೇ ಭಾಗದಲ್ಲಿ ಸ್ಮಶಾನ ಭೂಮಿಗಳ ಒತ್ತುವರಿಯಾಗಿರುವುದು ಕಂಡು ಬಂದಲ್ಲಿ, ಕೂಡಲೇ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪ.ಜಾತಿ ಮತ್ತು ಪಂಗಡದ ಯೋಜನೆಗಳ ಅನುದಾನದಿಂದ ಕೈಗೊಂಡ ಕಾಮಗಾರಿಗಳ ಪರಿಶೀಲನೆಗೆ ಸತ್ಯಶೋಧನಾ ಸಮಿತಿ ರಚಿಸಬೇಕು, ವಿವಿಧ ಪಿಂಚಣಿ ಯೋಜನೆಗಳ ಬಗ್ಗೆ ಸಮುದಾಯದ ಜನತೆಗೆ ಅರಿವು ಮೂಡಿಸಬೇಕು, ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರಗಳನ್ನು ಮೀಸಲಾತಿಗೆ ಪರಿಗಣಿಸಬೇಕು, ಸಮುದಾಯದ ಜನತೆಯ ಜಾಗ ಒತ್ತುವರಿ ಸಮಸ್ಯೆಗಳನ್ನು ಆದ್ಯತೆಯಲ್ಲಿ ಬಗೆಹರಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಸಮಿತಿಯ ಸದಸ್ಯರು ಮನವಿ ಮಾಡಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.



