ಯಲ್ಲಾಪುರದಲ್ಲಿ ಆರೋಗ್ಯ ಕೇಂದ್ರ, ಅಂಗನವಾಡಿ ಹಾಗೂ ಅಪಘಾತ ಸ್ಥಳಕ್ಕೆ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೊಡಬೋಲೆ ಭೇಟಿ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಸುಷ್ಮಾ ಗೊಡಬೋಲೆ ಅವರು ಶುಕ್ರವಾರ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಆರೋಗ್ಯ ಸೇವೆಗಳು, ಮೂಲಸೌಕರ್ಯ ಹಾಗೂ ಮಳೆಗಾಲದ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಯಲ್ಲಾಪುರ–ಅಂಕೋಲಾ ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ತಿರುವಿನಲ್ಲಿ ಜುಲೈ 9ರಂದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತಕ್ಕೆ ಕಾರಣವಾದ ಅಂಶಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಅರಬೈಲ್ ಘಟ್ಟ ವ್ಯಾಪ್ತಿಯ ಭೂಕುಸಿತ ಸಂಭವನೀಯ ಪ್ರದೇಶಗಳು ಹಾಗೂ ಅಪಾಯಕಾರಿ ತಿರುವುಗಳಿಗೂ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಪರಿಶೀಲನೆ ವೇಳೆ ಯಲ್ಲಾಪುರ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ಯಲ್ಲಾಪುರ ಪೊಲೀಸ್ ನಿರೀಕ್ಷಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *