4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ಮಳೆ ಸುದ್ದಿ ರಾಜ್ಯ ಶಿರಸಿ

Spread the love

ಮಂಗಳೂರು: ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಆಗಿಲ್ಲ, ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು ಸರಿಯಲ್ಲ. ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.

ರಾಜ್ಯ ಸರ್ಕಾರ ತಕ್ಷಣವೇ ಬರ ಅಧ್ಯಯನ ಸಮಿತಿ ರಚಿಸಿ ಜಿಲ್ಲಾವಾರು ಸ್ಥಳ ಪರಿಶೀಲನೆ ನಡೆಸಬೇಕು. ಬೆಳೆ ನಷ್ಟ, ಕುಡಿವ ನೀರಿನ ಸಮಸ್ಯೆ, ರೈತರ ಆರ್ಥಿಕ ಸಂಕಷ್ಟ ಸೇರಿದಂತೆ ಎಲ್ಲ ಅಂಶಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ವಾಸ್ತವ ಸ್ಥಿತಿಯ ವರದಿ ನೀಡಿದರೆ ಮಾತ್ರ ಕೇಂದ್ರದಿಂದ ಅಗತ್ಯ ಪರಿಹಾರ ಹಾಗೂ ವಿಶೇಷ ನೆರವು ದೊರೆಯಲಿದೆ. ಅದೇ ವೇಳೆ ಕೇಂದ್ರ ಸರ್ಕಾರವೂ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಘೋಷಿಸುವಲ್ಲಿ ವಿಳಂಬ ಮಾಡಬಾರದು ಎಂದು ಆಗ್ರಹಿಸಿದರು.

ಅತಿವೃಷ್ಟಿಯಿಂದ ಅಡಿಕೆ, ತೆಂಗು, ಬಾಳೆ, ಕಾಳುಮೆಣಸು ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಭಾರೀ ಹಾನಿಯಾಗಿದ್ದು, ಜಿಲ್ಲಾಧಿಕಾರಿ ಮೂಲಕ ತಕ್ಷಣವೇ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಬೇಕು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಎಲ್ಲ ಅರ್ಹ ರೈತರಿಗೆ ವಿಮೆ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಒಂದೇ ಪಂಚಾಯಿತಿ ಮಳೆ ದಾಖಲೆ ಆಧರಿಸಿ ಸುತ್ತಲಿನ ಗ್ರಾಮಗಳ ರೈತರಿಗೆ ವಿಮೆ ನಿರಾಕರಿಸುವುದು ಅನ್ಯಾಯ, ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಪ್ರತ್ಯೇಕ ಮಳೆಮಾಪನ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದರು.

ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವ ಏಕೆ?: ಸಚಿವ ಯು.ಟಿ. ಖಾದರ್ ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುತ್ತೇನೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಆಡಳಿತಾತ್ಮಕ ಜವಾಬ್ದಾರಿಯನ್ನು ಒಬ್ಬರೇ ಪರಿಣಾಮಕಾರಿಯಾಗಿ ನಿರ್ವಹಿಸುವುದು ಹೇಗೆ ಸಾಧ್ಯ, ಪ್ರತಿ ಜಿಲ್ಲೆಗೆ ಪ್ರತ್ಯೇಕ ಉಸ್ತುವಾರಿ ಸಚಿವರನ್ನು ನೇಮಿಸುವ ಮೂಲಕ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದರು.

ರೈತರ ಸಮಸ್ಯೆ, ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಕರಾವಳಿ ಸಂರಕ್ಷಣೆ ವಿಷಯಗಳಲ್ಲಿ ಸರ್ಕಾರಗಳು ರಾಜಕೀಯವನ್ನು ಬದಿಗಿಟ್ಟು ತಕ್ಷಣ ಕಾರ್ಯೋನ್ಮುಖವಾಗಬೇಕು. ಇಲ್ಲದಿದ್ದರೆ ರಾಜ್ಯದ ರೈತರು ಹಾಗೂ ಕರಾವಳಿ ಭಾಗದ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.

ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ, ಕಾರ್ಯಾಧ್ಯಕ್ಷರ ಶಶಿರಾಜ ಶೆಟ್ಟಿ ಕೊಳಂಬೆ, ವಿನ್ಸಂಟ್, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್‌ ಘಟಕದ ಅಧ್ಯಕ್ಷ ಜಾಕೆ ಮಾಧವ ಗೌಡ ಸೇರಿದಂತೆ ಹಲವರು ಇದ್ದರು.

ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಬೇಕು: ಭೋಜೇಗೌಡ

ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತದಿಂದ ಮನೆಗಳು, ರಸ್ತೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿದ್ದರೂ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಮರವಂತೆ ಕರಾವಳಿಯಲ್ಲಿ ಕಡಲ್ಕೊರೆತವನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ಮಾದರಿಯ ಸಂರಕ್ಷಣಾ ಕಾಮಗಾರಿಗಳನ್ನು ಉಳ್ಳಾಲದಲ್ಲೂ ಕೈಗೊಂಡರೆ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯವಾಗುತ್ತದೆ. ಉಳ್ಳಾಲ ಭಾಗದ ಜನರು ವರ್ಷಂಪ್ರತಿ ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಸಂರಕ್ಷಣಾ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಜನರ ಜೀವ ಹಾಗೂ ಆಸ್ತಿಯನ್ನು ರಕ್ಷಿಸಬೇಕು. ಈ ವಿಷಯದಲ್ಲಿ ಜನಪ್ರತಿನಿಧಿಗಳು ಹಾಗೂ ಸರ್ಕಾರ ಹೆಚ್ಚು ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಒತ್ತಾಯಿಸಿದರು.

Leave a Reply

Your email address will not be published. Required fields are marked *