ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕ್ರೀಡೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ದೇಶ ವಿದೇಶ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.

<

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ಅಂತರರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ. ಶಿಸ್ತು, ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದ್ದು, ಮುಂದಿನ ಕ್ರೀಡಾ ಪಯಣಕ್ಕೂ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡೆಗೆ ಪೂರಕವಾದ ವಾತಾವರಣವಿದ್ದು, ಕಾರವಾರ ಜಿಲ್ಲಾ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು. ಪೋಷಕರು ಮಕ್ಕಳನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಾಜಿ, ಉತ್ತರ ಕನ್ನಡ ಜಿಲ್ಲೆಯ ಯುವಕರಲ್ಲಿ ಅಪಾರ ಪ್ರತಿಭೆಯಿದ್ದು, ಅವರಿಗೆ ಉತ್ತಮ ತರಬೇತಿ ಸೌಲಭ್ಯಗಳನ್ನು ಕಲ್ಪಿಸಬೇಕು. ಸತತ ಪರಿಶ್ರಮ ಮತ್ತು ತಾಳ್ಮೆಯಿಂದ ಯಾವುದೇ ಗುರಿ ಸಾಧಿಸಬಹುದು. ಕಾಮನ್‌ವೆಲ್ತ್ ಕ್ರೀಡಾಕೂಟ, ಏಷ್ಯನ್ ಗೇಮ್ಸ್ ಹಾಗೂ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದು, ಜಿಲ್ಲೆ ಹಾಗೂ ದೇಶಕ್ಕೆ ಮತ್ತಷ್ಟು ಕೀರ್ತಿ ತರುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು.

ಶಿವಾಜಿ ಅವರ ಪ್ರತಿಭೆಯನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಬೆಳೆಸಿದ ತರಬೇತುದಾರ ಪ್ರಕಾಶ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕಾರವಾರ ರೋಟರಿ ಸೀಸೈಡ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಶಿವಾಜಿ ಅವರನ್ನು ಸನ್ಮಾನಿಸಿ ನಗದು ಬಹುಮಾನ ನೀಡಿ ಗೌರವಿಸಿದವು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *