ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು, ಎಲ್ಲ ಇಲಾಖೆಗಳು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿ ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ–2031 ವರದಿಗಳ ಅಂತಿಮಗೊಳಿಸುವ ಜಿಲ್ಲಾ ಮಟ್ಟದ ವಲಯವಾರು ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ತ್ವರಿತವಾಗಿ ಅನುಮೋದನೆ ಪಡೆಯಬೇಕಾದರೆ ಇಲಾಖೆಗಳು ತಮ್ಮ ಅಗತ್ಯತೆಗಳು ಮತ್ತು ಪ್ರಸ್ತಾವನೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು ಎಂದು ಹೇಳಿದರು. ಜಿಲ್ಲೆಯ ಉಸ್ತುವಾರಿ ಸಚಿವರು ಅಥವಾ ಹಿರಿಯ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರಸ್ತಾವನೆಗಳನ್ನು ಮಂಡಿಸಿದರೆ ಯೋಜನೆಗಳಿಗೆ ಶೀಘ್ರ ಮಂಜೂರಾತಿ ದೊರೆತು ಜನರಿಗೆ ಸೌಲಭ್ಯ ತಲುಪಲಿದೆ ಎಂದರು.
ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ದೂರದೃಷ್ಟಿ ಯೋಜನೆ–2031ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಸಲ್ಲಿಸಿರುವ ಅಂಕಿ-ಅಂಶಗಳು ಮತ್ತು ಸೂಚಕಗಳನ್ನು ಮರುಪರಿಶೀಲಿಸಿ, ಲೋಪಗಳನ್ನು ಸರಿಪಡಿಸಿ ಅಂತಿಮ ವರದಿ ಸಲ್ಲಿಸುವಂತೆ ಸೂಚಿಸಿದರು.
ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಒಟ್ಟು ಆದಾಯ ಮತ್ತು ಅನುದಾನದ ಮಾಹಿತಿಯನ್ನು ಮರು ಪರಿಶೀಲಿಸಬೇಕು. ಸರ್ಕಾರದಿಂದ ದೊರೆಯುವ ಅನುದಾನವನ್ನೂ ಒಟ್ಟು ಆದಾಯದ ಲೆಕ್ಕದಲ್ಲಿ ಸೇರಿಸಿ ನಿಖರ ದತ್ತಾಂಶ ಸಿದ್ಧಪಡಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, 2018ರ ಸಮೀಕ್ಷೆಯ ಅಂಕಿ-ಅಂಶಗಳ ಜೊತೆಗೆ ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿರುವ ವಸತಿ ರಹಿತರು ಮತ್ತು ನಿವೇಶನ ರಹಿತರ ಮಾಹಿತಿಯನ್ನು ಪರಿಶೀಲಿಸಿ ನವೀಕರಿಸಬೇಕು ಎಂದು ತಿಳಿಸಿದರು. ವಾಟರ್‌ಶೆಡ್, ಸೂಕ್ಷ್ಮ ನೀರಾವರಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ವ್ಯಾಪ್ತಿಯ ಹನಿ ಹಾಗೂ ತುಂತುರು ನೀರಾವರಿ ಯೋಜನೆಗಳ ಕಳೆದ ಏಳು ವರ್ಷಗಳ ಮಾಹಿತಿಯನ್ನು ಕ್ರೋಢೀಕರಿಸಿ ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕ್ಷ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad







