ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ಧ ಯಾವುದೇ ರಾಜಿ ಇಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಕಲಿ ವೈದ್ಯರ ವಿರುದ್ಧ ಬರುವ ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಿ, ಕಾನೂನಿನ ಅನ್ವಯ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ತನಿಖೆ ನಡೆಸಲು ಜಿಲ್ಲಾ ಮಟ್ಟದ ವಿಶೇಷ ಪಡೆ ರಚಿಸಲಾಗಿದೆ. ನಿಯಮ ಉಲ್ಲಂಘಿಸಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರು ಹಾಗೂ ಅಕ್ರಮ ಕ್ಲಿನಿಕ್‌ಗಳ ವಿರುದ್ಧ ಗರಿಷ್ಠ ಪ್ರಮಾಣದ ದಂಡ ವಿಧಿಸುವುದು, ಕ್ಲಿನಿಕ್‌ಗಳನ್ನು ಮುಚ್ಚಿಸುವುದು ಹಾಗೂ ಪುನರಾವರ್ತಿತ ಪ್ರಕರಣಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿದರು.
ಅರ್ಹತೆ ಮತ್ತು ಅನುಮತಿ ಪಡೆದ ವೈದ್ಯಕೀಯ ಪದ್ಧತಿಯಲ್ಲಿ ಮಾತ್ರ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಬೇಕು. ಅನುಮತಿಯಿಲ್ಲದೆ ಚಿಕಿತ್ಸೆ ಅಥವಾ ಔಷಧ ವಿತರಣೆ ನಡೆಸುವುದು ಪತ್ತೆಯಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಖಾಸಗಿ ಕ್ಲಿನಿಕ್‌ಗಳು, ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್‌ಗಳಲ್ಲಿ ನಿಯಮಿತ ತಪಾಸಣೆ ನಡೆಸಿ, ನಕಲಿ ವೈದ್ಯರ ಹಾವಳಿಯನ್ನು ತಡೆಯಲು ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 2026ರ ಏಪ್ರಿಲ್‌ನಿಂದ ಇದುವರೆಗೆ ಕೆಪಿಎಂಇ ಕಾಯ್ದೆ ಉಲ್ಲಂಘಿಸಿದ 7 ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿದ್ದು**, ಅವರ ಕ್ಲಿನಿಕ್‌ಗಳನ್ನು ಮುಚ್ಚಲಾಗಿದೆ. ಜೊತೆಗೆ 1.45 ಲಕ್ಷ ದಂಡ ವಸೂಲು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಗದೀಶ ಯಾಜಿ, ಆರ್ಥೋಪೆಡಿಕ್ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ನಿತಿನ್ ಪಿಕಳೆ, ಐಎಂಎ ಅಧ್ಯಕ್ಷ ಡಾ. ಸುರೇಶ್ ಭಟ್, ಸಾಮಾಜಿಕ ಕಾರ್ಯಕರ್ತೆ ಯಶೋಧ ಹೆಗಡೆ, ವಕೀಲ ಡಾ. ಕೃಷ್ಣಾನಂದ ಬಿ. ನಾಯ್ಕ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೊರಕರ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad







