ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾರ್ಯ ಪಡೆ ಸೇರಿದಂತೆ ಎಲ್ಲ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಪಂ ಸಿಇಒ ಡಾ. ದಿಲೀಷ್ ಶಶಿ ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ಇಲಾಖೆಯ ಆದ್ಯತೆಯಾಗಿದ್ದು, ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲ ಕಾಮಗಾರಿಗಳನ್ನು ನಿಗದಿತ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸಬೇಕು. ಜಿಪಿಎಸ್ ವಿವರಗಳೊಂದಿಗೆ ಕಾಮಗಾರಿಯ ಸ್ಥಳದ ಛಾಯಾಚಿತ್ರಗಳನ್ನು ಸಲ್ಲಿಸಿದ ಬಳಿಕವೇ ಸಂಬಂಧಿತ ಕಾಮಗಾರಿಗಳ ಬಿಲ್ ಮೊತ್ತ ಬಿಡುಗಡೆ ಮಾಡಲಾಗುವುದು ಎಂದು ಸೂಚಿಸಿದರು.
ಇದೇ ವೇಳೆ, ಕೊಳವೆಬಾವಿ ಕೊರೆತ ಕಾರ್ಯ ಪೂರ್ಣಗೊಂಡ ತಕ್ಷಣವೇ ಅವುಗಳಿಗೆ ವಿದ್ಯುತ್ ಸಂಪರ್ಕ ಹಾಗೂ ಪಂಪ್‌ಸೆಟ್ ಅಳವಡಿಸುವ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ದುರಸ್ತಿ ಕಾರ್ಯಗಳು ಹಾಗೂ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಕುರಿತು ವಿಸ್ತೃತ ಚರ್ಚೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕ್ಷ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಇದ್ದರು.
What do you feel about this post?
Like
Love
Happy
Haha
Sad







