ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿದ ಆರೋಪದಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಾಂಗ್ರೆಸ್ ಮುಖಂಡರು ಕಾನೂನು ಕ್ರಮಕ್ಕೆ ಆಗ್ರಹಿಸಿ ದೂರು ಸಲ್ಲಿಸಿದ್ದರು.
ಮಂಗಳವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ದೂರಿನ ಆಧಾರದಲ್ಲಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲ ಹಬೀಬ್ ಅಲಿ, ಹರೀಶ್ ಪಾಂಗಾಳ ಇದ್ದರು.
What do you feel about this post?
Like
Love
Happy
Haha
Sad







