ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತದ ಪರವಾಗಿ ನಡೆದ ಹೋರಾಟಕ್ಕೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ನಿರಾಧಾರ ಆರೋಪ ಹಾಗೂ ಬೆದರಿಕೆ ಹಾಕಿರುವುದು ಖಂಡನೀಯ ಎಂದರು. ಈ ಭಾಷಣದ ವಿಡಿಯೊ ಸಾಕ್ಷ್ಯ ಲಭ್ಯವಿದ್ದು, ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕ ಕಾರ್ಯಕ್ರಮದಲ್ಲಿ ಇತರ ಬಿಜೆಪಿ ಜನಪ್ರತಿನಿಧಿಗಳು ಉಪಸ್ಥಿತರಿದ್ದರೂ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸದೆ ಮೌನ ವಹಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದರು.
ದ್ವೇಷದ ಭಾಷೆ ಹಾಗೂ ಬೆದರಿಕೆಯ ರಾಜಕಾರಣ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಸಂವಿಧಾನಕ್ಕೆ ಪ್ರಮಾಣವಚನ ಸ್ವೀಕರಿಸಿರುವ ಜನಪ್ರತಿನಿಧಿಗಳು ಇಂತಹ ಹೇಳಿಕೆಗಳಿಂದ ದೂರವಿರಬೇಕು ಎಂದು ಭಂಡಾರಿ ಅಭಿಪ್ರಾಯಪಟ್ಟರು.
ಈ ಸಂಬಂಧ ರಾಜ್ಯ ಗೃಹ ಸಚಿವರೊಂದಿಗೆ ಚರ್ಚಿಸಿ, ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad







