ಮಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ 183 ಸರಕಾರಿ ಆಸ್ಪತ್ರೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ನಿಟ್ಟಿನಲ್ಲಿ ಸಂಪೂರ್ಣ ಡಿಜಿಟಲ್ ಸ್ಪರ್ಶ ನೀಡಲಾಗುತ್ತದೆ. ಈಗಾಗಲೇ ನಾಲ್ಕು ಜಿಲ್ಲೆಯ 40 ಆಸ್ಪತ್ರೆಗಳಲ್ಲಿ ಪೈಲೆಟ್ ಯೋಜನೆ ಅಡಿಯಲ್ಲಿ ಇ ಹೆಲ್ತ್ ಸಾಫ್ಟವೇರ್ ಜೋಡಿಸುವ ಕೆಲಸ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಸರ್ಕಾರಿ ಆರೋಗ್ಯ ಸೇವೆ ಹೆಚ್ಚು ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಜನಸ್ನೇಹಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಇಡಲಾಗುತ್ತಿದೆ. ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಟೆಲಿ-ಐಸಿಯು, ಮಕ್ಕಳ ತುರ್ತು ಚಿಕಿತ್ಸಾ ವಿಭಾಗ ಮತ್ತು ಶಿಶು ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ. ಜತೆಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿ ಬಿಡುಗಡೆಯಾಗುವ ವೇಳೆ ಸರ್ಕಾರ ಅವರ ಚಿಕಿತ್ಸೆಗೆ ಎಷ್ಟು ವೆಚ್ಚ ಮಾಡಿದೆ ಎಂಬುದನ್ನು ವಿವರಿಸುವ ಬಿಲ್ ಶುಲ್ಕ ನೀಡುವ ವ್ಯವಸ್ಥೆ ಕೂಡ ಜಾರಿಗೆ ತರಲಾಗುವುದು. ಇದರಿಂದ ಸಾರ್ವಜನಿಕರಲ್ಲಿ ಸರ್ಕಾರದ ಆರೋಗ್ಯ ವೆಚ್ಚದ ಬಗ್ಗೆ ಅರಿವು ಮೂಡಲಿದೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಸಂಪೂರ್ಣ ಡಿಜಿಟಲ್ ವ್ಯವಸ್ಥೆಗೆ ಪರಿವರ್ತಿಸುವ ಯೋಜನೆ ರೂಪಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಪ್ರತಿಯೊಬ್ಬ ರೋಗಿಯ ಆರೋಗ್ಯ ಹಾಗೂ ಚಿಕಿತ್ಸೆಯ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಆದ್ಯತೆ ನೀಡಲಾಗುತ್ತದೆ. ಪರಿಣಾಮ ರೋಗಿಯ ಚಿಕಿತ್ಸೆಯ ನಿರಂತರತೆ ಕಾಪಾಡಲು ಮತ್ತು ಸಕಾಲದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಅನುಕೂಲ ಆಗಲಿದೆ ಎಂದು ತಿಳಿಸಿದರು.
ನಮಗೆ ಆಸ್ಪತ್ರೆಗಳಲ್ಲಿ ವೈದ್ಯರ ಸಂಖ್ಯೆಯಷ್ಟೇ ಮುಖ್ಯವಲ್ಲ, ರೋಗಿಗೆ ಅಗತ್ಯ ಮತ್ತು ಆಯ್ಕೆಯ ಚಿಕಿತ್ಸೆಯು ಸಿಗುವುದು ಮುಖ್ಯ. ಈ ದೃಷ್ಟಿಯಿಂದ ಅಲೋಪತಿ ಆಸ್ಪತ್ರೆಗಳ ಪಕ್ಕದಲ್ಲೇ ‘ಆಯುಷ್ ಮಂದಿರ’ಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್‌ಗಳಲ್ಲಿ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಅಜಿನಮೊಟೊ, ಕೃತಕ ಬಣ್ಣ ಬಳಕೆ ಹಾಗೂ ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೋಟೆಲ್ ಮತ್ತು ರೆಸ್ಟೊರೆಂಟ್‌ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರು ಒದಗಿಸುವಂತೆ ಸೂಚನೆ ನೀಡಲಾಗುವುದು. ಆಹಾರದಲ್ಲಿ ಅಜಿನಮೊಟೊ ಹಾಗೂ ಕೃತಕ ಬಣ್ಣಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಆರೋಗ್ಯ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಭಾರತ ವಿಶ್ವಕ್ಕೆ ಮಾದರಿ ಆಗಿದ್ದು, ಆಹಾರ ಸುರಕ್ಷತೆಯ ವಿಚಾರದಲ್ಲಿ ಅಮೆರಿಕ ಕಠಿಣ ಮಾನದಂಡ ಅನುಸರಿಸುತ್ತಿದೆ. ಅಮೆರಿಕ ಸೇರಿದಂತೆ ಹಲವು ದೇಶಗಳಿಗೆ ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಿದರೆ ರೈತರಿಗೆ ಉತ್ತಮ ಆರ್ಥಿಕ ಲಾಭ ದೊರೆಯಲಿದೆ ಎಂದು ಆರೋಗ್ಯ ಸಚಿವ ಖಾದರ್ ತಿಳಿಸಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಕೆ ಅಪ್ಪಿ ಇದ್ದರು.
What do you feel about this post?
Like
Love
Happy
Haha
Sad





