ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದಲ್ಲಿ ನೇತ್ರಾವತಿ ಸೇರಿದಂತೆ ಜಿಲ್ಲೆಯ ಬಹುತೇಕ ನದಿಗಳು ಅಪಾಯದ ಮಟ್ಟಕ್ಕೆ ಸಮೀಪಿಸಿ ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಮಳೆ ಮುಂದುವರೆದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ.
ಬೆಳಗ್ಗಿನಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು ಸಮೀಪ ಸ್ಥಳೀಯ ನದಿಯ ನೀರು ರಸ್ತೆಯ ಮೇಲೆ ಹರಿದ ಪರಿಣಾಮ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಹಲವೆಡೆ ಕಿಂಡಿ ಅಣೆಕಟ್ಟುಗಳ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಗ್ರಾಮಗಳ ನಡುವಿನ ಸಂಪರ್ಕಕ್ಕೂ ವ್ಯತ್ಯಯ ಉಂಟಾಗಿದೆ.
ಭಾರೀ ಗಾಳಿಯೂ ಮಳೆಯೊಂದಿಗೆ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಮನೆ ಮಾಡಿದೆ. ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದ್ದು, ತುರ್ತು ಪರಿಸ್ಥಿತಿಗೆ ಜಿಲ್ಲಾಡಳಿತ ಸಜ್ಜಾಗಿದೆ.
ನೆರಿಯಾ ಸಿಯೋನ್ ಆಶ್ರಮದ ತಡೆಗೋಡೆ ಭಾರೀ ಮಳೆಯ ಪರಿಣಾಮ ಕುಸಿದು ಹಾನಿ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಮಾಹಿತಿ ಸಂಗ್ರಹಿಸಿದರು.
ತಾಲೂಕಿನ ಹಲವು ಪ್ರಮುಖ ರಸ್ತೆಗಳಲ್ಲಿ ಹಳ್ಳ-ಕೊಳ್ಳಗಳು ಹಾಗೂ ಚರಂಡಿಗಳು ತುಂಬಿ ಹರಿಯುತ್ತಿದ್ದು, ನಾವೂರು ಪೇಟೆಯ ವ್ಯಾಪಾರ ಮಳಿಗೆಗಳಿಗೆ ಮಳೆ ನೀರು ನುಗ್ಗಿದೆ. ವ್ಯಾಪಾರಸ್ಥರು ನೀರು ಹೊರಹಾಕುವ ಕಾರ್ಯದಲ್ಲಿ ತೊಡಗಿದ್ದು, ವ್ಯಾಪಾರಕ್ಕೂ ಅಡಚಣೆ ಉಂಟಾಗಿದೆ.
ಮುಂಡಾಜೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಭಾರೀ ಮಳೆಯಿಂದ ನದಿ, ತೋಡುಗಳು ತುಂಬಿ ಹರಿದು ಗದ್ದೆ, ತೋಟಗಳು ಜಲಾವೃತಗೊಂಡಿವೆ. ಕೆಲವು ಮನೆಗಳಿಗೂ ನೀರು ನುಗ್ಗಿದ್ದು, ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಕೃಷಿ ಜಮೀನುಗಳಿಗೆ ನೀರು ನುಗ್ಗಿರುವುದರಿಂದ ಬೆಳೆ ಹಾನಿಯಾಗುವ ಭೀತಿ ರೈತರಲ್ಲಿ ಹೆಚ್ಚಾಗಿದೆ.
ಇನ್ನೊಂದೆಡೆ, ಮುಂಡಾಜೆ–ಧರ್ಮಸ್ಥಳ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಉಜಿರೆ–ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯಲ್ಲೂ ಮಳೆ ನೀರು ಹರಿದು ರಸ್ತೆ ನದಿಯಂತಾಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ತಾಲೂಕಿನ ವಿವಿಧ ಭಾಗಗಳಿಂದ ಮಳೆಯಿಂದ ಉಂಟಾದ ಹಾನಿಗಳ ಕುರಿತು ನಿರಂತರ ಮಾಹಿತಿ ಬರುತ್ತಿದ್ದು, ಮಳೆ ಇನ್ನೂ ಮುಂದುವರಿಯುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಪರಿಸ್ಥಿತಿಯ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದ್ದು, ನದಿ ತೀರದ ಹಾಗೂ ಗುಡ್ಡಗಾಡು ಪ್ರದೇಶದ ನಿವಾಸಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸದಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
What do you feel about this post?
Like
Love
Happy
Haha
Sad





