ಸಾವಿರಾರು ಉದ್ಯೋಗಗಳ ಅವಕಾಶ: ಅ. 7-8ರಂದು ಮೂಡುಬಿದಿರೆಯಲ್ಲಿ ‘ಆಳ್ವಾಸ್ ಪ್ರಗತಿ-2026’: ಪ್ರಸಾದ ಶೆಟ್ಟಿ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ

Spread the love

ಕಾರವಾರ: ಉದ್ಯೋಗದ ನಿರೀಕ್ಷೆಯಲ್ಲಿ ಇರುವ ಪದವೀಧರರು, ತಾಂತ್ರಿಕ ಶಿಕ್ಷಣ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸಾವಿರಾರು ಉದ್ಯೋಗಾವಕಾಶಗಳನ್ನು ಕಲ್ಪಿಸುವ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ದೇಶದ ವಿವಿಧ ಕ್ಷೇತ್ರಗಳ 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 24 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಅವರು ಸೋಮವಾರ ಕಾರವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. .

<

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯಡಿ ಅಭ್ಯರ್ಥಿಗಳು ಹಾಗೂ ಉದ್ಯೋಗದಾತ ಸಂಸ್ಥೆಗಳಿಗೆ ಯಾವುದೇ ಶುಲ್ಕವಿಲ್ಲದೆ ಈ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. 2007ರಿಂದ ಆರಂಭವಾದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳವು ದೇಶದ ಪ್ರತಿಷ್ಠಿತ ನೇಮಕಾತಿ ವೇದಿಕೆಗಳಲ್ಲಿ ಒಂದಾಗಿ ಬೆಳೆದಿದ್ದು, ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯಮ ಸಂಸ್ಥೆಗಳ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಹಾಗೂ ಅವಕಾಶವಂಚಿತ ಪ್ರತಿಭಾವಂತ ಯುವಕರಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ಇಲ್ಲಿಯವರೆಗೆ ನಡೆದ 23 ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 66,432ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಕಂಪನಿಗಳ ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಪಡೆದಿದ್ದಾರೆ.
ಈ ಬಾರಿಯ ಮೇಳದಲ್ಲಿ ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್, ಚಿಲ್ಲರೆ ವ್ಯಾಪಾರ, ಶಿಕ್ಷಣ, ಮಾಧ್ಯಮ, ಆತಿಥ್ಯ ಹಾಗೂ ದೂರಸಂಪರ್ಕ ಸೇರಿದಂತೆ ವಿವಿಧ ಕ್ಷೇತ್ರಗಳ 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ 343 ಕಂಪನಿಗಳು ಭಾಗವಹಿಸುವುದನ್ನು ಖಚಿತಪಡಿಸಿದ್ದು, 24,298ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ತಿಳಿಸಿದರು.

2026ನೇ ಸಾಲಿನ ಪದವೀಧರರ ಜೊತೆಗೆ ಹಿಂದಿನ ವರ್ಷಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದವರು ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಗೂ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಬಾರಿ ಕಡ್ಡಾಯ ಉಚಿತ ಆನ್‌ಲೈನ್ ನೋಂದಣಿ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಚಾಟ್‌ಬಾಟ್ ಸೌಲಭ್ಯವನ್ನೂ ಪರಿಚಯಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಸಾದ ಶೆಟ್ಟಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *