ಕಾರವಾರ: ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಜಿಲ್ಲೆಯ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡವಾಗಿ ಕರ್ತವ್ಯ ನಿರ್ವಹಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.
ಮಂಗಳವಾರ ಕ್ರಿಮ್ಸ್‌ನಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರು ಹಾಗೂ ಮುಖ್ಯಮಂತ್ರಿಗಳೊಂದಿಗಿನ ಸಂವಾದ ಸಭೆಯ ಬಳಿಕ ಜಿಲ್ಲೆಯ ಸರ್ಕಾರಿ ನೌಕರರು ನೀಡಬೇಕಾದ ಸಾರ್ವಜನಿಕ ಸೇವೆ, ಪಾರದರ್ಶಕ ಆಡಳಿತ ಹಾಗೂ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೇಂದ್ರಸ್ಥಾನದಲ್ಲೇ ವಾಸ ಕಡ್ಡಾಯ
ಜಿಲ್ಲೆಯ ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ನಿಯೋಜಿಸಿರುವ ಕೇಂದ್ರಸ್ಥಾನದಲ್ಲೇ ಕಡ್ಡಾಯವಾಗಿ ವಾಸಿಸಬೇಕು. ಕೇಂದ್ರಸ್ಥಾನದಿಂದ ಹೊರಗೆ ವಾಸವಿದ್ದು ಕರ್ತವ್ಯ ನಿರ್ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಆಗಸ್ಟ್ 15ರೊಳಗೆ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹೆಸರು, ಕಚೇರಿ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ವಾಸದ ವಿಳಾಸದ ವಿವರಗಳನ್ನು ಕ್ರೋಢೀಕರಿಸಿ ಅಧಿಕೃತ ಕೈಪಿಡಿ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ
ಕಚೇರಿಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಭ್ರಷ್ಟಾಚಾರದ ಕುರಿತು ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಹಾಗೂ ಅಗತ್ಯ ಮಾಹಿತಿಯ ಫಲಕಗಳನ್ನು ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದರು.
ಸಾರ್ವಜನಿಕರಿಂದ ಬರುವ ದೂರುಗಳ ಮೇಲೆ ಮುಖ್ಯಮಂತ್ರಿಗಳ ಕಚೇರಿಯಿಂದಲೂ ನಿಗಾ ವಹಿಸಲಾಗುತ್ತಿದೆ. ಕರ್ತವ್ಯ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜನಸ್ಪಂದನ ಸಭೆ ನಡೆಸಲು ಸೂಚನೆ
ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಇಲಾಖೆ ರೂಪಿಸಲಾಗಿದ್ದು, ಹಿರಿಯ ಅಧಿಕಾರಿಗಳ ತಂಡ ಇದರ ಮೇಲ್ವಿಚಾರಣೆ ನಡೆಸಲಿದೆ. ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆಗಳನ್ನು ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಶೇ 100ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಹೆಸರು ಅಥವಾ ಇತರ ವಿವರಗಳಲ್ಲಿ ವ್ಯತ್ಯಾಸವಿದ್ದರೆ ಅಗತ್ಯ ದಾಖಲೆಗಳೊಂದಿಗೆ ತಿದ್ದುಪಡಿ ಮಾಡಿಕೊಳ್ಳಬಹುದು. ಅನಗತ್ಯವಾಗಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕದಂತೆ ಕ್ರಮ ವಹಿಸಬೇಕು. ಈಗಾಗಲೇ ನಡೆದಿರುವ ಹೆಸರುಗಳ ಅಳಿಸುವಿಕೆ ಕುರಿತು ಮತಗಟ್ಟೆ ಮಟ್ಟದ ಅಧಿಕಾರಿಗಳು ಮರುಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
‘ಸೂಚನೆಗಳು ಕೆಳಹಂತದ ಸಿಬ್ಬಂದಿಗೂ ತಲುಪಲಿ’
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡುವ ನಿರ್ದೇಶನಗಳು ಹಾಗೂ ಸೂಚನೆಗಳು ಕೆಳಹಂತದ ಸಿಬ್ಬಂದಿಗೂ ತಲುಪಿ, ಅವುಗಳ ಸಮರ್ಪಕ ಅನುಷ್ಠಾನವಾಗಬೇಕು ಎಂದರು.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಣೆ ಕುರಿತು ರಾಜ್ಯ ಮಟ್ಟದಲ್ಲಿ ಉತ್ತಮ ಹೆಸರು ಇದೆ. ಅದನ್ನು ಮತ್ತಷ್ಟು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
‘ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಗುರಿ’
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದರು.
‘ನಾನು ಸೇರಿದಂತೆ ನನ್ನ ಸಚಿವ ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ತಂಡ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ’ ಎಂದು ಕರೆ ನೀಡಿದರು.
‘ರಾಜ್ಯದ ಜನರ ಸೇವೆ ಮಾಡುವ ಅವಕಾಶ 5.50 ಲಕ್ಷ ಸರ್ಕಾರಿ ನೌಕರರಿಗೆ ಮಾತ್ರ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜನರ ಬದುಕಿನಲ್ಲಿ ಬದಲಾವಣೆ ತರುವ ಜವಾಬ್ದಾರಿ ನಮ್ಮ ಮೇಲಿದೆ. ಸರ್ಕಾರಿ ನೌಕರರ ಸೇವೆಯಿಂದಲೇ ರಾಜ್ಯ ಈ ಹಂತಕ್ಕೆ ಬೆಳೆದಿದೆ. ನಮ್ಮಲ್ಲಿರುವ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳು ಬೇರೆಡೆಗಳಲ್ಲೂ ದೊರೆಯಬೇಕು’ ಎಂದು ಹೇಳಿದರು.
‘ನಾವು ಕೆಲಸ ಮಾಡುವುದು ಜನರಿಗಾಗಿ. ಯಾರ ಒತ್ತಡಕ್ಕೂ ಮಣಿಯದೆ, ಆತ್ಮಸಾಕ್ಷಿಗೆ ಒಪ್ಪುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ. ಪ್ರತಿ ತಾಲ್ಲೂಕಿನ ಅಧಿಕಾರಿಗಳು ತಮ್ಮ ದಿನದ ಕಾರ್ಯಕ್ರಮದ ವಿವರವನ್ನು ಹಿರಿಯ ಅಧಿಕಾರಿಗಳಿಗೆ ನೀಡಬೇಕು. ಸಹಕಾರ ಹಾಗೂ ಕಂದಾಯ ಅಧಿಕಾರಿಗಳಿಗೆ ನ್ಯಾಯ ನೀಡುವ ಅಧಿಕಾರವಿದೆ. ನ್ಯಾಯಪೀಠದಿಂದ ಅನ್ಯಾಯವಾಗಬಾರದು’ ಎಂದು ಮುಖ್ಯಮಂತ್ರಿ ಸೂಚಿಸಿದರು.
ರಾಜ್ಯದ 750 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ಸುಮಾರು 2.50 ಲಕ್ಷ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.
What do you feel about this post?
Like
Love
Happy
Haha
Sad





