ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಬಿಸಿಎಫ್‌ನಿಂದ ವಿದ್ಯಾರ್ಥಿವೇತನ: ಬಿಸಿಎಫ್ ಅಧ್ಯಕ್ಷ ಬಿ.ಕೆ. ಯೂಸುಫ್

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಆ.16ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ನಗರದ ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಬಿಸಿಎಫ್ ಅಧ್ಯಕ್ಷ ಬಿ.ಕೆ. ಯೂಸುಫ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

<

ಬಿಸಿಎಫ್ ಕಳೆದ 25 ವರ್ಷಗಳಿಂದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಾ ಬಂದಿದೆ. ಈ ಬಾರಿಯೂ ಅರ್ಹ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತಿದೆ. ವಿದ್ಯಾರ್ಥಿವೇತನ ವಿತರಣೆಯ ಜತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 100 ಮಹಿಳೆಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಮಹಿಳೆಯರು ಸ್ವಾವಲಂಬಿಗಳಾಗಲು ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂ‌ದರು.

ಆ.16ರಂದು ಬೆಳಗ್ಗೆ 10 ಗಂಟೆಗೆ ವ್ಯಕ್ತಿತ್ವ ವಿಕಸನ ಶಿಬಿರ ನಡೆಯಲಿದೆ. ಯುಎಇ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕರಾದ ಡಾ. ಪ್ರೊ. ಕಾಪು ಮುಹಮ್ಮದ್ ಹಾಗೂ ಮನಾಲ್ ಕಾಪು ಶಿಬಿರ ನಡೆಸಿಕೊಡಲಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಮದ್ರಸಾ ಪಬ್ಲಿಕ್ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್., ಬಿಸಿಎಫ್ ಸಂಸ್ಥಾಪಕ ಪೋಷಕ ಹಾಗೂ ಅಜ್ಮಾನ್‌ನ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಹಿದೀನ್, ಯೆನೆಪೋಯ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ವೈ. ಅಬ್ದುಲ್ಲ ಕುಂಞಿ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ನಿಸಾರ್ ಅಹಮದ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ. ಫಾರೂಕ್, ಮಾಜಿ ಶಾಸಕ ಮೊಯ್ದಿನ್ ಬಾವ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್‌ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಯು.ಟಿ. ಇಫ್ತಿಕಾರ್, ಬಿಸಿಎಫ್ ಗೌರವ ಸಲಹೆಗಾರ ಹಾಗೂ ಗಡಿಯಾರ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಇಬ್ರಾಹೀಂ ಗಡಿಯಾರ್, ನಫೀಸ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಅಬೂಸಾಲಿಹ್, ವೈಟ್ ಮಾರ್ಸ್ ಎಲೆಕ್ಟ್ರಾನಿಕ್ಸ್ ಎಲ್‌ಎಲ್‌ಸಿ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ರಹಿಮಾನ್, ಬಿಸಿಸಿಐ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಮುಕ್ಕ ಸೀಫುಡ್ ವ್ಯವಸ್ಥಾಪಕ ನಿರ್ದೇಶಕ ಕೆ. ಮಹಮ್ಮದ್ ಹಾರಿಸ್, ಸೌದಿ ಅರೇಬಿಯಾದ ಎಕ್ಸ್‌ಪರ್ಟೀಸ್ ಆಡಳಿತ ನಿರ್ದೇಶಕ ಶೇಖ್ ಕರ್ನಿರೆ, ಬೆಂಗಳೂರು ಪ್ರೆಸಿಡೆನ್ಸಿ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಕೌಸರ್ ನಿಸಾರ್ ಹಾಗೂ ಮಿಸ್ಬಾ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಝಾಹಿದಾ ಜಲೀಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ಸಮಿತಿ ಅಧ್ಯಕ್ಷ ಎಂ.ಇ. ಮೂಳೂರು, ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹಮ್ಮದ್, ಸಲಹೆಗಾರ ಅಬೂಸಾಲಿಹ್, ಉಪಾಧ್ಯಕ್ಷ ಅಬ್ದುಲ್ ರಹಮಾನ್, ಸಮಿತಿ ಸದಸ್ಯರಾದ ಯಾಕೂಬ್ ದೇವ ಮತ್ತು ಅಬ್ದುಲ್ ರಹಿಮಾನ್ ಸಜಿಪ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *