ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಮಾಧ್ಯಮ:ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ರಾಜ್ಯ ಶಿರಸಿ

Spread the love

ಕಾರವಾರ: ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಜನರಿಗೆ ತಲುಪಿಸುವುದರ ಜತೆಗೆ, ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿಯೂ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.

<

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ), ಬೆಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ‘ವಾರ್ತಾಲಾಪ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮಗ್ರ ಮಾಹಿತಿ ತಲುಪಿಸುವುದು ಅಗತ್ಯ. ಯೋಜನೆಗಳ ಮಾಹಿತಿ, ಅರ್ಹತೆ ಹಾಗೂ ಸೌಲಭ್ಯ ಪಡೆಯುವ ವಿಧಾನವನ್ನು ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸುವುದರಿಂದ ಯಾವುದೇ ಅರ್ಹ ವ್ಯಕ್ತಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ವಿಶಾಲವಾಗಿರುವುದರಿಂದ ಅಧಿಕಾರಿಗಳು ಪ್ರತಿಯೊಂದು ಪ್ರದೇಶಕ್ಕೂ ನೇರವಾಗಿ ತಲುಪಲು ಸಾಧ್ಯವಾಗದ ಸಂದರ್ಭಗಳಿವೆ. ಇಂತಹ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗುವ ವರದಿಗಳ ಮೂಲಕ ವಿವಿಧ ಸಮಸ್ಯೆಗಳು ಜಿಲ್ಲಾಡಳಿತದ ಗಮನಕ್ಕೆ ಬರುತ್ತಿದ್ದು, ಅವುಗಳ ಆಧಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿದೆ. ಜಿಲ್ಲಾಡಳಿತಕ್ಕೆ ಮಾಧ್ಯಮಗಳು ನೀಡುತ್ತಿರುವ ಸಹಕಾರ ಶ್ಲಾಘನೀಯ ಎಂದು ಹೇಳಿದರು.

ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಸಾರ್ವಜನಿಕರ ಕುಂದುಕೊರತೆಗಳನ್ನು ವಾರ್ತಾ ಇಲಾಖೆಯಿಂದ ಪಡೆದು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಸಾರ್ವಜನಿಕರ ದೂರುಗಳನ್ನು ನೋಂದಾಯಿಸಿಕೊಂಡು, ಸಂಬಂಧಪಟ್ಟ ಇಲಾಖೆಯಿಂದ ವರದಿ ಪಡೆದು ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 12.30 ಲಕ್ಷ ಮತದಾರರಿದ್ದು, ಶೇ.91.3ರಷ್ಟು ಗಣತಿ ನಮೂನೆಗಳನ್ನು ಸಂಗ್ರಹಿಸಿ, ಶೇ.100ರಷ್ಟು ಗಣಕೀಕರಣ ಪೂರ್ಣಗೊಳಿಸಲಾಗಿದೆ. ಮರಣ, ವಿಳಾಸ ಬದಲಾವಣೆ ಹಾಗೂ ನಕಲಿ ದಾಖಲೆಗಳ ಕಾರಣದಿಂದ ಶೇ.8.7ರಷ್ಟು ಮತದಾರರ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ನಡೆಯಲಿದ್ದು, ಈ ಮಾಹಿತಿಯನ್ನು ಎಲ್ಲ ರಾಜಕೀಯ ಪಕ್ಷಗಳಿಗೂ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಮಾಧ್ಯಮಗಳು ಸಾರ್ವಜನಿಕರು ಮತ್ತು ಆಡಳಿತದ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿವೆ. ಮಾಧ್ಯಮಗಳಲ್ಲಿ ಪ್ರಕಟವಾಗುವ ಸಮಸ್ಯೆಗಳನ್ನು ಸ್ವಯಂಪ್ರೇರಿತ ದೂರುಗಳಾಗಿ ಪರಿಗಣಿಸಿ, ಸಂಬಂಧಪಟ್ಟ ಇಲಾಖೆಯಿಂದ ವರದಿ ಪಡೆದು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಎದುರಾದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ವಿಶೇಷ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ 16ರಿಂದ 30 ವರ್ಷದೊಳಗಿನ ಯುವಕರಿಗಾಗಿ ಭಾರತ ಜೋಡೋ ಯುವ ಸಂಘದ ನೋಂದಣಿ ಕಾರ್ಯ ಆರಂಭವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದೀಪನ್ ಎಂ.ಎನ್. ಮಾತನಾಡಿ, ಪ್ರಜಾಪ್ರಭುತ್ವದ ಪ್ರಮುಖ ಸ್ತಂಭವಾಗಿರುವ ಮಾಧ್ಯಮಗಳು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕಾರ್ಯಕ್ರಮಗಳು ಮತ್ತು ಜಾಗೃತಿ ಅಭಿಯಾನಗಳನ್ನು ಜನರಿಗೆ ತಲುಪಿಸುವ ಜತೆಗೆ ಸಾರ್ವಜನಿಕರ ಪ್ರತಿಕ್ರಿಯೆಯನ್ನು ಇಲಾಖೆಗೆ ತಲುಪಿಸುವಲ್ಲಿ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಮಾಹಿತಿ ಹರಡುವ ವೇಗದಲ್ಲಿಯೇ ತಪ್ಪು ಮಾಹಿತಿ, ಸುಳ್ಳು ಸುದ್ದಿ ಹಾಗೂ ವದಂತಿಗಳೂ ಹರಡುತ್ತಿವೆ. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ವಾಸ್ತವಾಂಶ ಪರಿಶೀಲಿಸಿ ಜವಾಬ್ದಾರಿಯುತವಾಗಿ ಸುದ್ದಿ ಪ್ರಕಟಿಸುವ ಮೂಲಕ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಮಾಧ್ಯಮಗಳು ಸಹಕರಿಸಬೇಕು ಎಂದು ಹೇಳಿದರು.

ಪೊಲೀಸ್ ಇಲಾಖೆ ಹಮ್ಮಿಕೊಳ್ಳುತ್ತಿರುವ ಸೈಬರ್ ಅಪರಾಧ ಜಾಗೃತಿ, ನಶಾಮುಕ್ತ ಭಾರತ ಹಾಗೂ ಮಾದಕವಸ್ತು ಮುಕ್ತ ಕರ್ನಾಟಕ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳು ನೀಡುತ್ತಿರುವ ಸಹಕಾರವನ್ನು ಅವರು ಶ್ಲಾಘಿಸಿದರು.

ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಜಿ.ಎಸ್. ರವೀಂದ್ರ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಧನ-ಧಾನ್ಯ ಕೃಷಿ ಯೋಜನೆ, ನಮೋ ಡ್ರೋನ್ ದೀದಿ, ಇ-ನಾಮ್, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ, ನವೋದ್ಯಮ ಹಾಗೂ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಕ್ಕೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ ಮತ್ತು ಅಂಕಿ-ಅಂಶಗಳ ಕುರಿತು ಮಾಹಿತಿ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್. ಮರಿಯಪ್ಪ ಅವರು ಅರಣ್ಯ ಸಂರಕ್ಷಣೆ ಮತ್ತು ಬುಡಕಟ್ಟು ಸಮುದಾಯಗಳ ಹಕ್ಕುಗಳ ಕುರಿತು, ಗೋಕರ್ಣ ಪೊಲೀಸ್ ಠಾಣೆಯ ಉಪನಿರೀಕ್ಷಕ ಶ್ರೀಧರ ಎಸ್.ಆರ್. ಅವರು ನಶಾಮುಕ್ತ ಭಾರತ ಅಭಿಯಾನದ ಕುರಿತು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂದಕುಮಾರ್ ಅವರು ಮಹಿಳೆ ಮತ್ತು ಮಕ್ಕಳ ಸಬಲೀಕರಣ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರತೀಕ್ ಅವರು ಮೀನುಗಾರಿಕಾ ಕ್ಷೇತ್ರದ ಬಲವರ್ಧನೆ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳು ಆರ್ಥಿಕ ಸೇರ್ಪಡೆ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಶಿವಕುಮಾರ್, ಬೆಂಗಳೂರಿನ ವಾರ್ತಾ ಶಾಖೆಯ ಸಹಾಯಕ ನಿರ್ದೇಶಕರಾದ ಮಧು ಹಾಗೂ ಲಕ್ಷ್ಮೀಕಾಂತ, ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *