ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡುವ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಪ್ರಕಟಿಸಿದ ಮುಖ್ಯಮಂತ್ರಿ, ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೂ ಅವರ ಹೆಸರು ಇಡಲು ತೀರ್ಮಾನಿಸಲಾಗಿದೆ ಎಂದರು.
ಗ್ರಾಮೀಣ ಆಡಳಿತಕ್ಕೆ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಅವರ ಜನ್ಮದಿನದಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯಿತಿ ಪ್ರಶಸ್ತಿ’ನೀಡುವ ಕಾರ್ಯಕ್ರಮ ರೂಪಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
ರಾಮಕೃಷ್ಣ ಹೆಗಡೆ ಅವರು ಕೇವಲ ಅಧಿಕಾರ ನಡೆಸಿದ ನಾಯಕರಲ್ಲ. ಪಂಚಾಯಿತಿಯಿಂದ ಸಂಸತ್ತಿನವರೆಗೆ ಹೊಸ ನಾಯಕತ್ವವನ್ನು ಸೃಷ್ಟಿಸಿದ ನಾಯಕ ಎಂದು ಡಿ.ಕೆ. ಶಿವಕುಮಾರ್ ಬಣ್ಣಿಸಿದರು.
ಒಬ್ಬ ನಾಯಕನ ಕೆಲಸ ಕೇವಲ ಹಿಂಬಾಲಕರನ್ನು ಸೃಷ್ಟಿಸುವುದಲ್ಲ. ನಾಯಕರನ್ನು ಸೃಷ್ಟಿಸುವುದೇ ನಿಜವಾದ ನಾಯಕತ್ವ. ರಾಮಕೃಷ್ಣ ಹೆಗಡೆ ಅವರ ಮೂಲ ತತ್ವವೂ ಇದೇ ಆಗಿತ್ತು ಎಂದರು.
ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕದ ಪ್ರಯೋಗಗಳು ದೇಶಕ್ಕೆ ಮಾದರಿಯಾಗಿದ್ದವು. ಬಳಿಕ ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 73 ಮತ್ತು 74ನೇ ಸಂವಿಧಾನ ತಿದ್ದುಪಡಿಗಳಿಗೆ ಈ ಚಿಂತನೆ ಪ್ರೇರಣೆಯಾಯಿತು ಎಂದು ಸ್ಮರಿಸಿದರು.
ಹೆಗಡೆ ಅವರು ಜಾತಿ ಆಧಾರಿತ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ರಾಜಕಾರಣ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ್ದರು. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದರು. ಅಧಿಕಾರದಲ್ಲಿದ್ದಾಗಲೂ ಜನಸೇವೆ ಮತ್ತು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಕೆಲಸ ಮಾಡಿದ್ದರು ಎಂದು ಹೇಳಿದರು.
ರಾಮಕೃಷ್ಣ ಹೆಗಡೆ ಅವರ ಬದುಕು ಒಂದು ನಿಘಂಟಿನಂತಿತ್ತು. ಅವರ ಆಚಾರ–ವಿಚಾರಗಳನ್ನು ಗಮನಿಸುವ ಮೂಲಕ ಅನೇಕ ವಿಚಾರಗಳನ್ನು ಕಲಿಯಬಹುದು. ಅಧಿಕಾರವನ್ನು ಶಕ್ತಿಯ ಸಂಕೇತವಾಗಿ ಅಲ್ಲ, ಜನಸೇವೆಗೆ ದೊರೆತ ಅವಕಾಶವಾಗಿ ನೋಡಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದರು.
ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯ ರಾಜ್ಯದ ಬಜೆಟ್ ಗಾತ್ರ ಹಾಗೂ ಇಂದಿನ ಬಜೆಟ್ ಗಾತ್ರವನ್ನು ಹೋಲಿಸಿದ ಶಿವಕುಮಾರ್, 1982–87ರ ಅವಧಿಯಲ್ಲಿ ರಾಜ್ಯದ ಬಜೆಟ್ ಗಾತ್ರ ಸುಮಾರು ₹3,687 ಕೋಟಿ ಇತ್ತು. ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅದು ಅಂದಾಜು ₹4.50 ಲಕ್ಷ ಕೋಟಿಯ ಮಟ್ಟಕ್ಕೆ ಏರಿದೆ ಎಂದರು.
ಆ ಅವಧಿಯಲ್ಲಿ ರಾಜ್ಯದ ಆದಾಯ ಸಂಗ್ರಹವೂ ಇಂದಿನ ಪ್ರಮಾಣಕ್ಕೆ ಹೋಲಿಸಿದರೆ ಬಹಳ ಕಡಿಮೆ ಇತ್ತು. ಆಗಿನ ಸಣ್ಣ ಯೋಜನೆಗಳು ಇಂದು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳಾಗಿ ರೂಪುಗೊಳ್ಳುತ್ತಿವೆ ಎಂದು ಹೇಳಿದರು.
ಕರ್ನಾಟಕದಲ್ಲಿ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಶಿಕ್ಷಣದ ವಿಸ್ತರಣೆಗೆ ರಾಮಕೃಷ್ಣ ಹೆಗಡೆ ಅವರ ನೀತಿಗಳು ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಹೇಳಿದರು.
ಇಂದು ಕರ್ನಾಟಕದಲ್ಲಿ ವರ್ಷಕ್ಕೆ ಸುಮಾರು 13,940 ವೈದ್ಯರು ಹಾಗೂ 1.25 ಲಕ್ಷಕ್ಕೂ ಹೆಚ್ಚು ಎಂಜಿನಿಯರ್‌ಗಳು ರೂಪುಗೊಳ್ಳುತ್ತಿದ್ದಾರೆ. ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಕರ್ನಾಟಕದ ಪ್ರಮುಖ ಆಸ್ತಿಯಾಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೂ ಹೆಗಡೆ ಅವರ ಕಾಲದ ನೀತಿಗಳು ದಾರಿ ಮಾಡಿಕೊಟ್ಟವು. ಇದರ ಪರಿಣಾಮವಾಗಿ ಕರ್ನಾಟಕ ಇಂದು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು.
What do you feel about this post?
Like
Love
Happy
Haha
Sad





