3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಅಪರಾಧ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

<

ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ.

ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವವರನ್ನು ಗುರಿಯಾಗಿಸಿಕೊಂಡು, ತಾನು ಅಧಿಕಾರ ಹೊಂದಿರುವ ವ್ಯಕ್ತಿಯೆಂದು ನಂಬಿಸಿ ಹಣ ಪಡೆದು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಎನ್ನಲಾಗಿದೆ.

ಈ ಸಂಬಂಧ ಮಂಗಳೂರು ಕದ್ರಿ ಪೊಲೀಸರು 2019ರ ಆಗಸ್ಟ್ 16ರಂದು ಪಂಪ್‌ವೆಲ್‌ನ ಲಾಡ್ಜ್‌ವೊಂದರಲ್ಲಿ ಕಾರ್ಯಾಚರಣೆ ನಡೆಸಿ ಸ್ಯಾಮ್ ಪೀಟರ್ ಸೇರಿದಂತೆ ಆತನ ತಂಡದ ಎಂಟು ಮಂದಿಯನ್ನು ಬಂಧಿಸಿದ್ದರು. ಬಳಿಕ ಜಾಮೀನು ಪಡೆದಿದ್ದ ಸ್ಯಾಮ್ ಪೀಟರ್, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ತನ್ನ ಗುರುತು ಮರೆಮಾಚಲು ಆರೋಪಿ ವಿವಿಧೆಡೆ ವಿವಿಧ ಹೆಸರುಗಳನ್ನು ಬಳಸಿಕೊಂಡು ವಾಸಿಸುತ್ತಿದ್ದ ಎನ್ನಲಾಗಿದೆ. ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಡ್ಯಾನಿ ತಾರಕನ್ ಸೇರಿದಂತೆ ಹಲವು ಹೆಸರುಗಳನ್ನು ಬಳಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಒಂದು ಸ್ಥಳದಲ್ಲಿ ಅಪರಾಧ ಎಸಗಿ ಮತ್ತೊಂದು ಸ್ಥಳಕ್ಕೆ ತೆರಳಿ ಹೆಸರು ಬದಲಿಸಿಕೊಂಡು ವಾಸಿಸುವ ಪ್ರವೃತ್ತಿಯನ್ನು ಆರೋಪಿ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಯಾಮ್ ಪೀಟರ್ ಕುಖ್ಯಾತ ವಂಚಕನಾಗಿದ್ದು, ‘ರಾಹುಲ್ ಪೀಟರ್’ ಎಂಬ ಹೆಸರಿನಲ್ಲಿ ಆತನ ವಿರುದ್ಧ 2001ರಿಂದ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ 17 ಪ್ರಕರಣ

ಆರೋಪಿಯ ವಿರುದ್ಧ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ, ಉಳ್ಳಾಲ, ಕೊಣಾಜೆ, ಉಡುಪಿ ನಗರ ಪೊಲೀಸ್ ಠಾಣೆ ಸೇರಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ಹಾಗೂ ಕುಶಾಲನಗರದಲ್ಲಿ ಪ್ರಕರಣಗಳು ದಾಖಲಾಗಿವೆ. ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಹಾಗೂ ಮಧ್ಯಪ್ರದೇಶದಲ್ಲಿಯೂ ವಂಚನೆ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯ ವಿರುದ್ಧ 17 ಬಾರಿ ನ್ಯಾಯಾಲಯದ ವಾರೆಂಟ್ ಹೊರಡಿಸಲಾಗಿತ್ತು. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪ್ರಕರಣದಲ್ಲಿ 14 ಬಾರಿ ವಾರೆಂಟ್ ಜಾರಿಯಾಗಿದ್ದು, ಬಳಿಕ ಉದ್ಘೋಷಣೆ ಪ್ರಕ್ರಿಯೆ ಕೈಗೊಳ್ಳಲಾಗಿತ್ತು.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯ ಪತ್ತೆ ಮತ್ತು ಬಂಧನ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *