ಮಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ಅನುಷ್ಠಾನದ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರಲಿವೆ ಎಂಬ ಟೀಕೆಗಳಿಗೆ ಗುರಿಯಾಗಿದ್ದರೂ, ಇಂದು ದೇಶಕ್ಕೆ ಮಾದರಿಯಾಗುವ ಜನಪರ ಯೋಜನೆಗಳಾಗಿ ಯಶಸ್ವಿಯಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ಆಡಳಿತ ವ್ಯವಸ್ಥೆಯ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡು ಜನಪರ ಯೋಜನೆಗಳಾಗಿ ರೂಪುಗೊಂಡಿವೆ. ಇವು ಕೇವಲ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳಲ್ಲ. ಜನರ ಜೀವನದಲ್ಲಿ ತಂದಿರುವ ಬದಲಾವಣೆಯನ್ನು ದಾಖಲೆಗಳ ಮೂಲಕ ತೋರಿಸುವ ಯೋಜನೆಗಳಾಗಿವೆ ಎಂದು ಅವರು ಹೇಳಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ನೀಡಿದ ಅನುದಾನವನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಂಡಿದ್ದಾರೆ. ಗೌರವಯುತ ಬದುಕು ನಡೆಸುವುದರೊಂದಿಗೆ ದೇಶದ ಆರ್ಥಿಕ ಶಕ್ತಿಯ ಭಾಗವಾಗುತ್ತಿದ್ದಾರೆ. ಅನೇಕ ಕುಟುಂಬಗಳು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿವೆ ಎಂದು ಸಚಿವರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗಿದೆ. ಗೃಹಜ್ಯೋತಿ ಯೋಜನೆಯು ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ದೊರೆತಿದೆ. ಅನ್ನಭಾಗ್ಯ ಯೋಜನೆಯು ಬಡ ಕುಟುಂಬಗಳ ಆಹಾರ ಭದ್ರತೆಗೆ ನೆರವಾಗಿದ್ದು, ಯುವನಿಧಿ ಯೋಜನೆಯು ಯುವಜನರಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಜೀವನದಲ್ಲಿ ಬದಲಾವಣೆ ತರಲು ಸಹಕಾರಿಯಾಗಿದೆ ಎಂದು ಯು.ಟಿ. ಖಾದರ್ ವಿವರಿಸಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಎಚ್.ಎಂ. ರೇವಣ್ಣ ಅವರು ‘ಸಂಜೀವಿನಿ ಮಾಸಿಕ ಸಂತೆ’ಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್, ಮಂಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಶಾಹುಲ್ ಹಮೀದ್, ರಫೀಕ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಕಾರ್ಯಕ್ರಮ ಆಯೋಜಿಸಿದ್ದರು. ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಶಕುಂತಲಾ ಶೆಣೈ ಸ್ವಾಗತಿಸಿದರು. ಗ್ರಾಮೀಣ ಉದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ನಿರೂಪಿಸಿದರು.
What do you feel about this post?
Like
Love
Happy
Haha
Sad





