ಕಾರವಾರ: ಕಲಾತ್ಮಕ ಹಾಗೂ ಆಕರ್ಷಕ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಂಗಮಂದಿರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಅವಧಿಯಲ್ಲಿ ಕಟ್ಟಡ ನಿರ್ಮಾಣದ ದರಗಳಲ್ಲೂ ಪರಿಷ್ಕರಣೆ ಆಗಿರುವುದರಿಂದ ಲೋಕೋಪಯೋಗಿ ಇಲಾಖೆಯಿಂದ ಹೊಸದಾಗಿ ಅಂದಾಜು ಪಟ್ಟಿ ಪಡೆದು ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಂಗಮಂದಿರ ನಿರ್ಮಾಣಕ್ಕಾಗಿ 20 ಗುಂಟೆ ಜಾಗವನ್ನು ಗುರುತಿಸಲಾಗಿದೆ. ಈ ಜಾಗವನ್ನು ರಂಗಮಂದಿರ ನಿರ್ಮಾಣಕ್ಕೆ ಮೀಸಲಿಡುವ ಸಂಬಂಧ ಅಗತ್ಯ ದಾಖಲೆಗಳನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ನೂತನ ರಂಗಮಂದಿರವನ್ನು ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಬೇಕು ಎಂದು ಹೇಳಿದರು.
ರಂಗಮಂದಿರದಲ್ಲಿ ಕಲಾ ಪ್ರದರ್ಶನಗಳಿಗೆ ಆರ್ಟ್ ಗ್ಯಾಲರಿ, ಗ್ರಂಥಾಲಯ, ಉತ್ತಮ ಧ್ವನಿ ಮತ್ತು ಬೆಳಕಿನ ವ್ಯವಸ್ಥೆ, ವಾಹನ ನಿಲುಗಡೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅವರು ಸಲಹೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ತಹಸೀಲ್ದಾರ್ ನಿಶ್ಚಲ್ ನರೋನಾ, ಪೌರಾಯುಕ್ತ ಜಗದೀಶ ಹುಲಗಜ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಾ ನಾಯ್ಕ ಹಾಗೂ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad





