ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೂರ್ವಾನುಮತಿ ಕಡ್ಡಾಯ, ಡಿಜೆ ಬಳಕೆಗೆ ಅವಕಾಶವಿಲ್ಲ: ಡಿಸಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ರಾಜ್ಯ ಶಿರಸಿ

Spread the love

ಕಾರವಾರ: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಯಾವುದೇ ಸಂದರ್ಭದಲ್ಲೂ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಮಣ್ಣಿನಿಂದ ಹಾಗೂ ರಾಸಾಯನಿಕ ರಹಿತ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನೇ ಬಳಸಬೇಕು. ಜಲಮೂಲಗಳು ಕಲುಷಿತವಾಗದಂತೆ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿ ಅಥವಾ ಕೃತಕ ಹೊಂಡಗಳಲ್ಲಿ ಮಾತ್ರ ವಿಸರ್ಜನೆ ಮಾಡಬೇಕು ಎಂದರು.

ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಗಣೇಶ ವಿಸರ್ಜನೆ ಮೆರವಣಿಗೆ ಸೇರಿದಂತೆ ಯಾವುದೇ ಸ್ಥಳದಲ್ಲಿ ಡಿಜೆ ಬಳಸುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಪೂರ್ವಾನುಮತಿ ಪಡೆಯಬೇಕು. ಪ್ರತಿಷ್ಠಾಪನಾ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಿ, ಸ್ವಯಂಸೇವಕರನ್ನು ನಿಯೋಜಿಸಬೇಕು. ಅಗತ್ಯ ಅನುಮತಿಗಳನ್ನು ಸಿಂಗಲ್ ವಿಂಡೋ ಮೂಲಕ ನೀಡುವಂತೆ ಸೂಚಿಸಿದರು.

ಪೆಂಡಾಲ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಹೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆ ಪರಿಶೀಲಿಸಬೇಕು. ಅನುಮತಿ ಪಡೆದವರು ನಿಗದಿತ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಣು ಗುಪ್ತಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ** ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *