ಮಂಗಳೂರು: ಬಂಟ ಸಮುದಾಯದವರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಬಂಟ ಕ್ರೀಡೋತ್ಸವದ ಮೂಲಕ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಭಾರತೀಯ ದಂತ ವೈದ್ಯಕೀಯ ಮಂಡಳಿ ಸದಸ್ಯ ಹಾಗೂ ನಮ್ಮ ಟಿವಿ ವಾಹಿನಿಯ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಹೇಳಿದರು.
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಆಯೋಜಿಸಿರುವ ಬಂಟ ಕ್ರೀಡೋತ್ಸವ–2026ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಗ್ರ ಸಮಾಜದ ಒಗ್ಗಟ್ಟು ಮತ್ತು ಭಾವೈಕ್ಯತೆ ಬಲಪಡಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರುಗುತ್ತು ಮಾತನಾಡಿ, ಕ್ರೀಡಾಕೂಟ ಆಯೋಜಿಸಿರುವ ಸಂಘಟಕರನ್ನು ಅಭಿನಂದಿಸಿದರು.
ಮಾಜಿ ರಣಜಿ ಕ್ರಿಕೆಟ್ ಆಟಗಾರ ರಕ್ಷಣ್ ರೈ ಕ್ರೀಡಾಪಟುಗಳ ಪಥಸಂಚಲನಕ್ಕೆ ಚಾಲನೆ ನೀಡಿದರು. ಲಾತೂರಿನ ಉದ್ಯಮಿ ದಿವಾಕರ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ಕೃಷ್ಣಪ್ರಸಾದ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಜತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಸೇರಿದಂತೆ ಹಲವರು ಇದ್ದರು.
ಅನೂಪ್ ಶೆಟ್ಟಿ ಪ್ರಾರ್ಥಿಸಿದರು. ಬಂಟ ಕ್ರೀಡಾಕೂಟದ ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ ಸ್ವಾಗತಿಸಿದರು. ಸಂಚಾಲಕ ಕಿರಣ್ ಪಕ್ಕಳ ಪೆರ್ಮಂಕಿಗುತ್ತು ವಂದಿಸಿದರು. ಗಣೇಶೋತ್ಸವ ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ಕಾರ್ಯಕ್ರಮ ನಿರೂಪಿಸಿದರು.
What do you feel about this post?
Like
Love
Happy
Haha
Sad





