ಕಾರ್ಕಳ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ಐವರು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ ರಾಜ್ಯ ಶಿಕ್ಷಣ

Spread the love

ಕಾರ್ಕಳ: ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅತ್ಯಗತ್ಯ. ಸಾಧಕನೊಬ್ಬನ ಸಾಧನೆಯ ಹಿಂದೆ ಶಿಕ್ಷಕರ ಪ್ರೇರಣೆ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸುತ್ತದೆ. ಅಂತಹ ಪ್ರೇರಣೆಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮೂಲಕ ಪಡೆಯುತ್ತಿರುವುದು ಶ್ಲಾಘನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಹಾಗೂ ಸಾರ್ವಜನಿಕ ದಂತ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಕಲ್ಯಾಣ ಪೆಂಟಪತಿ ಹೇಳಿದರು.

<

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ತಾಲೂಕಿನ ಐವರು ನಿವೃತ್ತ ಶಿಕ್ಷಕರನ್ನು ಗೌರವಿಸಿ ಅವರು ಮಾತನಾಡಿದರು.

‘ಶಿಕ್ಷಕರ ತ್ಯಾಗ, ಸಹನೆ ಮಾದರಿ’

ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಮಾತನಾಡಿ, ‘ನಮ್ಮ ಬದುಕಿನ ಹಾದಿಯಲ್ಲಿ ಪ್ರಾಥಮಿಕ ಶಿಕ್ಷಕರ ಪಾತ್ರ ಬಹುದೊಡ್ಡದು. ಶಿಕ್ಷಕರ ತ್ಯಾಗ ಮತ್ತು ಸಹನಶೀಲತೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ನಿವೃತ್ತ ಶಿಕ್ಷಕರಾದ ರಾಮಕೃಷ್ಣ ಹೆಬ್ಬಾರ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಐವರು ನಿವೃತ್ತ ಶಿಕ್ಷಕರಿಗೆ ಗೌರವ

ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಐವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಿರ್ಲಾಲು ಎನ್.ಎನ್. ರಾವ್ ಮೆಮೋರಿಯಲ್ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ರಾಮಕೃಷ್ಣ ಹೆಬ್ಬಾರ್, ಎಣ್ಣೆಹೊಳೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಚಂಪಾ ಡಿ. ಹೆಗ್ಡೆ, ಮಿಯ್ಯಾರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ, ರೆಂಜಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಅಣ್ಣಿ ಎಂ. ಹಾಗೂ ಶಿರ್ಲಾಲು ಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ದೈಹಿಕ ಶಿಕ್ಷಕಿ ಶಶಿಕಲಾ ದೇವಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ವಿದ್ಯಾವತಿ ಎಸ್. ಶೆಟ್ಟಿ ಹಾಗೂ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಕಾಲೇಜಿನ ಉಪಪ್ರಾಂಶುಪಾಲ ಸಾಹಿತ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ ಹಾಗೂ ಸಂಸ್ಥೆಯ ಹಿರಿಯ ಹಿತೈಷಿ ಅಪ್ರಾಯ ಕಿಣಿ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಸ್ವಾಗತಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *