ಪ್ರಜಾಸೇವೆ ಮೂಲಕ ಜನರ ಮನೆಬಾಗಿಲಿಗೆ ಆಡಳಿತ: ಶಾಸಕ ಭೀಮಣ್ಣ ನಾಯ್ಕ

ಜಿಲ್ಲಾ ಸುದ್ದಿ ಕಾರವಾರ ರಾಜ್ಯ ಶಿರಸಿ

Spread the love

ಸಿದ್ದಾಪುರ: ಸರ್ಕಾರದ ಜನಪರ ಯೋಜನೆಗಳು ಕೇವಲ ದಾಖಲೆಗಳಲ್ಲಿ ಉಳಿಯದೆ, ಬಡವರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ನೈಜ ಬದಲಾವಣೆ ತರುವಂತಿರಬೇಕು. ಸರ್ಕಾರದ ಯೋಜನೆಗಳು ಜನರ ಜೀವನಕ್ಕೆ ಬೆಳಕು ನೀಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

<

ಸಿದ್ದಾಪುರ ತಾಲ್ಲೂಕಿನ ಹಲಿಗೇರಿ ಹೋಬಳಿಯಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳು ಹಾಗೂ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ರಸ್ತೆ, ಚರಂಡಿ, ಕುಡಿಯುವ ನೀರು, ಶಾಲಾ–ಕಾಲೇಜು ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಈ ಸಭೆಗಳು ಸಹಕಾರಿಯಾಗಿವೆ ಎಂದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ 1.20 ಕೋಟಿಗೂ ಹೆಚ್ಚು ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ ಎಂದು ಹೇಳಿದರು.

ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿನಿಯರ ಜೊತೆಗೆ ವಿದ್ಯಾರ್ಥಿಗಳಿಗೂ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ಸಮಾನ ಅವಕಾಶಕ್ಕೆ ಒತ್ತು ನೀಡಲಾಗಿದೆ. ಯುವಕರನ್ನು ಸಂಘಟಿಸಿ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ‘ಭಾರತ್ ಜೋಡೋ’ ಯುವ ಸಂಘಟನೆ ಮೂಲಕ ಯುವಶಕ್ತಿಯನ್ನು ಸಬಲೀಕರಣಗೊಳಿಸಲಾಗುತ್ತಿದ್ದು, ಸಂಘಟನೆಗಳಿಗೆ ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುತ್ತಿದೆ ಎಂದರು.

20 ದಿನಗಳಲ್ಲಿ ಅಹವಾಲು ಪರಿಹಾರಕ್ಕೆ ಪ್ರಯತ್ನ

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ‘ಪ್ರಜಾಸೇವೆ’ ಆಂದೋಲನವು ಸಾರ್ವಜನಿಕರ ಅಹವಾಲುಗಳನ್ನು ತ್ವರಿತವಾಗಿ ಆಲಿಸಿ, ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ವಿನೂತನ ಅಭಿಯಾನವಾಗಿದೆ ಎಂದರು.

ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಲಾಗುವುದು. ಸ್ವೀಕರಿಸಿದ ಅರ್ಜಿಗಳಿಗೆ 20 ದಿನಗಳೊಳಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಇದನ್ನು ಎದುರಿಸಲು ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಿದೆ. ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ‘ಪ್ರಜಾಸೇವೆ’ ಕೇವಲ ಸಮಸ್ಯೆಗಳನ್ನು ಹೇಳಿಕೊಳ್ಳುವ ವೇದಿಕೆಯಲ್ಲ. ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು ಮತ್ತು ಸಾರ್ವಜನಿಕರ ಸಲಹೆಗಳನ್ನೂ ಅಧಿಕಾರಿಗಳ ಗಮನಕ್ಕೆ ತರಬಹುದು. ಇಂತಹ ಸಲಹೆಗಳು ಮುಂದಿನ ಯೋಜನೆಗಳ ರೂಪುರೇಷೆ ಸಿದ್ಧಪಡಿಸಲು ಸಹಕಾರಿಯಾಗಲಿವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ಅನುಕೂಲಕ್ಕಾಗಿ ‘ಆಸರೆ’ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಆನ್‌ಲೈನ್ ವಂಚನೆ ಹಾಗೂ ಸಂಶಯಾಸ್ಪದ ಕೊಂಡಿಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಅವರು, ಅಪರಿಚಿತ ಕೊಂಡಿಗಳನ್ನು ತೆರೆಯದಂತೆ ಎಚ್ಚರಿಕೆ ನೀಡಿದರು. ಯುವಜನರು ಮಾದಕವಸ್ತುಗಳಿಂದ ದೂರವಿದ್ದು, ಪೊಲೀಸ್ ಇಲಾಖೆಯ ಜನಸ್ನೇಹಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್. ಸೂರ್ಯವಂಶಿ, ಉಪವಿಭಾಗಾಧಿಕಾರಿ ಚಂದ್ರಶೇಖರ್ ಆರ್.ಜಿ., ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೇವರಾಜ ಎಂ. ಹಿತ್ತಲಕೊಪ್ಪ, ತಹಶೀಲ್ದಾರ್ ಮಂಜುಳಾ ನಾಯಕ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *