ಬೆಂಗಳೂರು: ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದಾವಣಗೆರೆ ಪೂರ್ವ ವಲಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವುದರ ಜತೆಗೆ, ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಆನ್‌ಲೈನ್ ವಂಚನೆಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಎನ್. ಸತೀಶ್ ಕುಮಾರ್ ಅವರು ಹೇಳಿದರು.
ದಾವಣಗೆರೆ ಪೂರ್ವ ವಲಯದ ನೂತನ ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಲಯದ ಭದ್ರತಾ ವ್ಯವಸ್ಥೆ ಹಾಗೂ ಸದ್ಯದ ಸವಾಲುಗಳ ಕುರಿತು ಮಾಹಿತಿ ಪಡೆದರು. ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಲಯ ವ್ಯಾಪ್ತಿಯ ದಾವಣಗೆರೆ, ಚಿತ್ರದುರ್ಗ ಹಾಗೂ ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಗಣೇಶೋತ್ಸವ ಸೇರಿದಂತೆ ವಿವಿಧ ಹಬ್ಬಗಳ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ಅದರಲ್ಲೂ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ನಿಗಾ ಇರಿಸಲಾಗುವುದು. ಶಿವಮೊಗ್ಗ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಧ್ವನಿವರ್ಧಕ ಹಾಗೂ ಧ್ವನಿವರ್ಧಕ ಸಾಧನಗಳ ಬಳಕೆಯಾಗದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹಬ್ಬಗಳ ಆಚರಣೆ ಶಾಂತಿಯುತವಾಗಿ ನಡೆಯುವಂತೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸೈಬರ್ ವಂಚನೆ ವಿರುದ್ಧ ಜಾಗೃತಿ
ಸೈಬರ್ ಅಪರಾಧ, ಆನ್‌ಲೈನ್ ವಂಚನೆ, ಬಹುಮಟ್ಟದ ಮಾರುಕಟ್ಟೆ ಯೋಜನೆಗಳು ಹಾಗೂ ಠೇವಣಿ ಹೆಸರಿನಲ್ಲಿ ನಡೆಯುವ ವಂಚನೆಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ವಂಚನೆಯ ಹೊಸ ವಿಧಾನಗಳು ಬೆಳಕಿಗೆ ಬಂದ ತಕ್ಷಣ ಅವುಗಳ ಕುರಿತು ಜನರಿಗೆ ಮಾಹಿತಿ ತಲುಪಿಸುವ ವ್ಯವಸ್ಥೆ ಬಲಪಡಿಸಬೇಕು ಎಂದು ಎನ್. ಸತೀಶ್ ಕುಮಾರ್ ಸೂಚಿಸಿದರು.
ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಿರಬೇಕು. ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಂಡು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಅಹವಾಲುಗಳಿಗೆ ಸ್ಪಂದಿಸುವ ಮೂಲಕ ವಿಶ್ವಾಸಾರ್ಹ ಪೊಲೀಸ್ ವ್ಯವಸ್ಥೆ ರೂಪಿಸಬೇಕು. ವಲಯದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಎರಡು ವಾರಗಳಿಂದ ಖಾಲಿಯಾಗಿದ್ದ ಹುದ್ದೆ
2003ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ ಅವರನ್ನು ಪೊಲೀಸ್ ಪ್ರಧಾನ ಕಚೇರಿ-1, ಬೆಂಗಳೂರಿನ ಐಜಿಪಿ ಹುದ್ದೆಯಿಂದ ದಾವಣಗೆರೆ ಪೂರ್ವ ವಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ಹಿಂದಿನ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಅವರು ಕಳೆದ ತಿಂಗಳು ನಿವೃತ್ತರಾದ ಬಳಿಕ ಪೂರ್ವ ವಲಯದ ಐಜಿಪಿ ಹುದ್ದೆ ಸುಮಾರು ಎರಡು ವಾರಗಳ ಕಾಲ ಖಾಲಿಯಾಗಿತ್ತು. ಇದೀಗ ಎನ್. ಸತೀಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಪ್ರಭಾರ ಐಜಿಪಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
What do you feel about this post?
Like
Love
Happy
Haha
Sad





