ಮಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ ಮಾಡುವ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಿವೇಶನದ ಜತೆಗೆ ಬಡವರ ಬದುಕಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದಕ್ಕೂ ಸರ್ಕಾರ ಆದ್ಯತೆ ನೀಡಿದೆ. ಭೂ ಒಡೆತನ ಯೋಜನೆಯಡಿ ಭೂಮಿಯಿಲ್ಲದ ಪರಿಶಿಷ್ಟರಿಗೆ ಭೂಮಿ ಒದಗಿಸುವ ಪ್ರಕ್ರಿಯೆ ಮುಂದುವರೆದಿದ್ದು, ನಿರಾಶ್ರಿತರಿಗೆ ಕನಿಷ್ಠ ಮೂಲಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಬೇಡಿಕೆಗೆ ಅನುಗುಣವಾಗಿ ಆರಂಭಿಸಲಾಗುವುದು. ವಸತಿ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೊಸ ಶಾಲೆಗಳ ಆರಂಭಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ವಿವಿಧ ಇಲಾಖೆಗಳ ಶೇ.24ರಷ್ಟು ಅನುದಾನ ಪರಿಶಿಷ್ಟ ಸಮುದಾಯಗಳಿಗೆ ತಲುಪುತ್ತಿದೆ ಎಂದರು.
ರಾಜ್ಯದಲ್ಲಿ ಸಮುದಾಯ ಭವನಗಳ ಬೇಡಿಕೆ ಹೆಚ್ಚಿದ್ದು, ಜಿಲ್ಲಾ ಮಟ್ಟದಲ್ಲಿ ₹4 ಕೋಟಿ, ತಾಲ್ಲೂಕು ಮಟ್ಟದಲ್ಲಿ ₹2 ಕೋಟಿ, ಹೋಬಳಿ ಮಟ್ಟದಲ್ಲಿ ₹85 ಲಕ್ಷ ಹಾಗೂ ಪಂಚಾಯಿತಿ ಮಟ್ಟದಲ್ಲಿ ₹20 ಲಕ್ಷ ಅನುದಾನ ನೀಡಲಾಗುತ್ತಿದೆ. ಗ್ರಂಥಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೂ ಒತ್ತು ನೀಡಲಾಗುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು, ಅಲ್ಲಿನ ವಿದ್ಯಾರ್ಥಿಗಳು ಶೇ 90 ಕ್ಕೂ ಅಧಿಕ ಅಂಕ ಗಳಿಸಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
What do you feel about this post?
Like
Love
Happy
Haha
Sad





