ದ.ಕ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ,ಕ್ರೀಡಾಂಗಣದ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ 20 ಕೋಟಿ ಅನುದಾನ: ಮೂಡಾ ಅಧ್ಯಕ್ಷ ಸಂತೋಷ ಕುಮಾರ್

ಕ್ರೀಡೆ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ಮಂಗಳಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸದಸ್ಯೆ ಶಾಲೆಟ್ ಪಿಂಟೋ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದಸರಾ ಕ್ರೀಡಾಕೂಟವು ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಗ್ರಾಮೀಣ ಪ್ರದೇಶಗಳ ಪ್ರತಿಭಾವಂತ ಕ್ರೀಡಾಪಟುಗಳಿಗೆ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದರು.

ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಅವರು ಮಾತನಾಡಿ, ಯುವಜನರನ್ನು ಪ್ರೋತ್ಸಾಹಿಸುವ ಹಾಗೂ ಅವರ ಕ್ರೀಡಾ ಮತ್ತು ಸಾಂಸ್ಕೃತಿಕ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುತ್ತಿದೆ. ಪ್ರತಿಯೊಂದು ಸಂಘಕ್ಕೂ ವಾರ್ಷಿಕ ₹10 ಲಕ್ಷ ನೆರವು ದೊರೆಯಲಿದೆ ಎಂದು ತಿಳಿಸಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಗಳಾ ಕ್ರೀಡಾಂಗಣದ ಅಭಿವೃದ್ಧಿಗೆ ₹20 ಕೋಟಿ ಅನುದಾನ ಮಂಜೂರಾಗಿದೆ. ಇದರಿಂದ ಕ್ರೀಡಾಂಗಣದ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಅನುಕೂಲವಾಗಲಿದೆ ಎಂದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಒಟ್ಟು 20 ಕ್ರೀಡಾ ಸ್ಪರ್ಧೆಗಳು ನಡೆದವು. ಜಿಲ್ಲಾಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಮುಂದಿನ ಹಂತದಲ್ಲಿ ಮೈಸೂರು ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್, ನೆಹರೂ ಯುವ ಕೇಂದ್ರದ ಉಪನಿರ್ದೇಶಕ ಉಲ್ಲಾಸ್ ಕೆ.ಟಿ., ವಿವಿಧ ಕ್ರೀಡಾ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸ್ವಾಗತಿಸಿದರು. ದೈಹಿಕ ಶಿಕ್ಷಕ ಮಮಚ್ಚನ್ ವಂದಿಸಿದರು. ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *