ಮಂಗಳೂರು: ಬದಲಾಗುತ್ತಿರುವ ಜೀವನಶೈಲಿ ಹಾಗೂ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ನಗರದ ಕದ್ರಿ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಮತ್ತು ಆಯುಷ್ ಸಂಘಟನೆಗಳ ಸಹಯೋಗದಲ್ಲಿ ನಡೆದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದವು ಜೀವನದ ಪ್ರತಿಯೊಂದು ಹಂತದಲ್ಲಿಯೂ ಆರೋಗ್ಯಕರ ಜೀವನ ನಡೆಸಲು ನೆರವಾಗುತ್ತದೆ. ಉತ್ತಮ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ಆಯುರ್ವೇದದ ಪಾತ್ರ ಮಹತ್ವದ್ದಾಗಿದೆ. ಆಯುರ್ವೇದದ ಆರೋಗ್ಯ ಸಂರಕ್ಷಣಾ ತತ್ವಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ ಎಂದು ಅವರು ಹೇಳಿದರು.
ಪ್ರತಿಯೊಬ್ಬರೂ ಆಯುರ್ವೇದದ ಮಹತ್ವವನ್ನು ಅರಿತು, ಆರೋಗ್ಯ ಕಾಪಾಡಿಕೊಳ್ಳುವ ಕ್ರಮಗಳನ್ನು ಜೀವನಶೈಲಿಯ ಭಾಗವಾಗಿಸಿಕೊಳ್ಳಬೇಕು ಎಂದು ಮಮತಾ ಗಟ್ಟಿ ತಿಳಿಸಿದರು.
ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್ ಮಾತನಾಡಿ, ಸಾವಿರಾರು ವರ್ಷಗಳಿಂದ ದೇಶದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ರೂಢಿಯಲ್ಲಿದೆ. ಪ್ರಕೃತಿ ಮತ್ತು ಮನುಷ್ಯನ ನಡುವಿನ ಅವಿನಾಭಾವ ಸಂಬಂಧವನ್ನು ಆಧರಿಸಿರುವ ಆಯುರ್ವೇದ ಪದ್ಧತಿ, ದೈನಂದಿನ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹಾಗೂ ಆರೋಗ್ಯಕರ ಜೀವನಶೈಲಿಗೆ ಅಗತ್ಯವಾದ ಮಾರ್ಗದರ್ಶನ ನೀಡುತ್ತದೆ ಎಂದರು.
ಬದಲಾಗುತ್ತಿರುವ ಜೀವನಕ್ರಮದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಆಯುರ್ವೇದದ ಮಹತ್ವವನ್ನು ಅರಿಯುವುದು ಹಾಗೂ ಅದರಲ್ಲಿರುವ ಆರೋಗ್ಯ ಸಂರಕ್ಷಣಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು.
ಡಾ. ಜಯಗೋವಿಂದ ಉಕ್ಕಿನಡ್ಕ ಹಾಗೂ ಶಾರದಾ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಂದೀಪ್ ಬೇಕಲ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸದಸ್ಯೆ ಲವೀನಾ ಪಿಂಟೋ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಮುರಳೀಧರ್ ಇದ್ದರು.
What do you feel about this post?
Like
Love
Happy
Haha
Sad







