ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಚಾರದ ಜಾಹೀರಾತುಗಳ ಮೇಲೆ ನಿಗಾ ವಹಿಸಲು ಜಿಲ್ಲೆಯಲ್ಲಿ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೂರದರ್ಶನ ವಾಹಿನಿಗಳು, ಕೇಬಲ್ ಜಾಲ, ರೇಡಿಯೊ, ಖಾಸಗಿ ಎಫ್‌ಎಂ ವಾಹಿನಿಗಳು, ಚಿತ್ರಮಂದಿರಗಳು, ಸಾರ್ವಜನಿಕ ಸ್ಥಳಗಳಲ್ಲಿನ ಧ್ವನಿ–ದೃಶ್ಯ ಪ್ರದರ್ಶನಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಚುನಾವಣಾ ಜಾಹೀರಾತುಗಳಿಗೆ ಪೂರ್ವ ಪ್ರಮಾಣೀಕರಣ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರದ ಅವಧಿಯಲ್ಲಿ ರಾಜಕೀಯ ಮುಖಂಡರು ಹಾಗೂ ಅಭ್ಯರ್ಥಿಗಳ ಪ್ರಚಾರ ಚಟುವಟಿಕೆಗಳ ಮೇಲೂ ಸಮಿತಿ ನಿಗಾ ವಹಿಸಲಿದೆ. ಜತೆಗೆ, ಮಾಧ್ಯಮಗಳಲ್ಲಿ ಪ್ರಸಾರವಾಗುವ ಪಾವತಿಸಿದ ಸುದ್ದಿಗಳ ಬಗ್ಗೆಯೂ ಮೇಲ್ವಿಚಾರಣೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅ.23 ರಂದು ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಸೆ.29ರಂದು ಚುನಾವಣಾ ಅಧಿಸೂಚನೆ ಪ್ರಕಟ ಆಗಿದ್ದು, ಅ.6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad





