ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ:, ಒಬ್ಬನ ಸಾವು, 9 ಕಾರ್ಮಿಕರಿಗೆ ಗಾಯ

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ದೇಶ ವಿದೇಶ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಇಲ್ಲಿನ ಹೊರವಲಯದ ಜೋಕಟ್ಟೆ ಸಮೀಪದ ಎಂಆರ್‌ಪಿಎಲ್‌ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದ ಶಬ್ದಕ್ಕೆ ಮಂಗಳೂರು ಸೇರಿದಂತೆ ಸುತ್ತಲಿನ ಹಲವು ಪ್ರದೇಶಗಳು ಬೆಚ್ಚಿಬಿದ್ದಿವೆ.ಘಟಕದಲ್ಲಿ ಪರೀಕ್ಷೆ ನಡೆಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ತೀವ್ರ ಗಾಯಗಳಾಗಿದ್ದು, 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮೃತ ವ್ಯಕ್ತಿಯನ್ನು ಮನೀಶ್ ಕರ್ಕೇಡ (30) ಎಂದು ತಿಳಿದು ಬಂದಿದ್ದು, ಈ ವ್ಯಕ್ತಿ ಗುತ್ತಿಗೆ ಆಧಾರದ ಸಿಬ್ಬಂದಿ ಎಂದು ತಿಳಿದು ಬಂದಿದೆ.

ಮಧ್ಯಾಹ್ನ ಸುಮಾರು 12.15ರ ವೇಳೆಗೆ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಜೋಕಟ್ಟೆ, ಸುರತ್ಕಲ್, ಕಾವೂರು, ಬಜಪೆ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಮನೆಗಳು ಮತ್ತು ಕಟ್ಟಡಗಳು ಕಂಪಿಸಿದ ಅನುಭವ ಆಗಿದೆ.

9 ಕಾರ್ಮಿಕರಿಗೆ ಗಾಯ

ಗಾಯಗೊಂಡವರನ್ನು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ನಿವಾಸಿ ರಾಜೇಶ್ ಅವರಿಗೆ ಸುಮಾರು ಶೇ35ರಷ್ಟು ಸುಟ್ಟ ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸಾದ್, ಇಂದ್ರಜೀತ್ ಮತ್ತು ರಾಮನ್ ಅವರನ್ನು ಎಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆರೋಮ್, ಜಯರಾಮ್, ಅವಿನಾಶ್ ಹಾಗೂ ಅಕ್ಷಯ್ ಅವರನ್ನು ಎಂಆರ್‌ಪಿಎಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ತಿಳಿಸಿದ್ದಾರೆ.

ಮಧ್ಯಾಹ್ನದ ವೇಳೆಗೆ ಘಟಕದಲ್ಲಿ ಪರೀಕ್ಷಾ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಇದಕ್ಕೂ ಮುನ್ನ ಬೆಳಿಗ್ಗೆ 11.30ರ ಸುಮಾರಿಗೆ ಶಿಫ್ಟ್ ಬದಲಾವಣೆಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಘಟಕದಿಂದ ಹೊರಗೆ ತೆರಳಿದ್ದರು. ಹೀಗಾಗಿ ಸಂಭವಿಸಬಹುದಾಗಿದ್ದ ಮತ್ತಷ್ಟು ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ.

ಘಟನೆಯ ಬೆನ್ನಲ್ಲೇ ಐದು ಅಗ್ನಿಶಾಮಕ ವಾಹನಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದವು. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಬಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಸ್ಫೋಟದ ಶಬ್ದಕ್ಕೆ ಬೆಚ್ಚಿಬಿದ್ದ ಜನರು

ಸ್ಫೋಟದ ತೀವ್ರ ಶಬ್ದ ಹಲವು ಕಿಲೋಮೀಟರ್ ದೂರದ ಪ್ರದೇಶಗಳಲ್ಲೂ ಕೇಳಿಸಿದೆ. ಜೋಕಟ್ಟೆ, ಪಣಂಬೂರು, ಕಾವೂರು, ಸುರತ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕೂಡ ಸ್ಫೋಟದ ಶಬ್ದ ಹಾಗೂ ಕಂಪನದ ಅನುಭವ ಆಗಿದೆ. ಘಟನೆ ಬಳಿಕ ಎಂಆರ್‌ಪಿಎಲ್‌ ಘಟಕದಿಂದ ದಟ್ಟ ಹೊಗೆ ಮೇಲಕ್ಕೆದ್ದ ದೃಶ್ಯ ಕಂಡು ಬಂದಿದೆ.

ವಿಮಾನ ನಿಲ್ದಾಣಕ್ಕೆ ಹಾನಿಯಾಗಿಲ್ಲ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆದರೆ ಸ್ಫೋಟದ ಶಬ್ದ ಹಾಗೂ ಕಂಪನದ ಅನುಭವ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲೂ ಆಗಿದೆ ಎಂದು ತಿಳಿದು ಬಂದಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಸಚಿವ ಖಾದರ್

ಎಂಆರ್‌ಪಿಎಲ್‌ನಲ್ಲಿ ಪರೀಕ್ಷೆ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶಾಲೆ, ಅಂಗನವಾಡಿ ಬಂದ್

ಸ್ಫೋಟದ ತೀವ್ರತೆಗೆ ಎಂಆರ್‌ಪಿಎಲ್ ಸಮೀಪದಲ್ಲಿಯೇ ಇದ್ದ ಜೋಕಟ್ಟೆ ಗ್ರಾಮ ಪಂಚಾಯತ್ ಕಚೇರಿ, ಗ್ರಂಥಾಲಯ, ಅಂಗನವಾಡಿ ಹಾಗೂ ಶಾಲೆ ಹಾಗೂ ಸುತ್ತಲಿನ ನೂರಾರು ಮನೆಗಳು ನಡುಗಿವೆ. ಹಲವು ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಗಾಬರಿಗೊಂಡ ಗ್ರಾಮಸ್ಥರು ಬೀದಿಗಿಳಿದು ಎಂಆರ್‌ಪಿಎಲ್ ಪ್ರವೇಶ ದ್ವಾರದ ಬಳಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *